ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಇದೇ 18 ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯು ಶೇ 100 ರಷ್ಟು ಫಲಿತಾಂಶವನ್ನು ದಾಖಲಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಅಲ್ಲದೆ ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರದ ಕ್ಯಾಂಪಸ್‌ಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾವನ್ನು ತಪ್ಪದೇ ಅಳವಡಿಸಬೇಕು. 686 ಕೊಠಡಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಧೀಕ್ಷಕರು, ಮೇಲ್ವಿಚಾರಕರು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿದಂತೆ ಈಗಾಗಲೇ 1,350 ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿಸಲಾಗಿದೆ ಎಂದು ತಿಳಿಸಿದರು.
ಇನ್ನೂ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗಡಿಯಾರಗಳನ್ನು ಅಳವಡಿಸಬೆಕು. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಪರಿಶೀಲನೆ ನಡೆಸಲು ತಂಡವನ್ನು ನೇಮಿಸಿದ್ದು, ಈಗಾಗಲೇ ಅವರು ಪರಿಶೀಲಿಸಿ ಮೂಲ ಸೌಲಭ್ಯ ಅಳವಡಿಸಿರುವ ಕುರಿತು ವರದಿ ನೀಡಿದ್ದಾರೆ ಎಂದು ಹೇಳಿದರು.
ಬಿಸಿಲಿನ ಶಾಖಾಘಾತಕ್ಕೆ ಮಕ್ಕಳು ಒಳಗಾಗುವ ಸಂಭವವಿದ್ದು, ಮಕ್ಕಳಿಗೆ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಒ.ಆರ್.ಎಸ್ ದ್ರಾವಣವನ್ನು ಸಹ ಹೆಚ್ಚು ಸಂಗ್ರಹಿಸಿಟ್ಟುಕೊಳ್ಳುವಂತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮಂಗಳೂರು ಸಿ.ಟಿ.ಇ. ಪ್ರಾಂಶುಪಾಲೆ ಪುಷ್ಪಲತಾ ಮಾತನಾಡಿದರು. ಸಹಾಯಕ ಆಯುಕ್ತೆ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್.ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಉಪಸ್ಥಿತರಿದ್ದರು.
14,151 ವಿದ್ಯಾರ್ಥಿಗಳು ನೋಂದಣಿ : ಜಿಲ್ಲೆಯಲ್ಲಿ ಹೊಸದಾಗಿ 13516 ವಿದ್ಯಾರ್ಥಿಗಳು 295 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಅವರಲ್ಲಿ 7353 ಗಂಡು ಮಕ್ಕಳು ಹಾಗೂ 6798 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.



