ವಿಜಯಪುರ : ದೇಶದಲ್ಲಿ ನಡೆದ ಅನೇಕ ಮಹತ್ವದ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲೇ ನಡೆದಿವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ನಗರದ ವಿಜಯ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಆಯೋಜಿಸಿದ್ದ ಒಂದು ದಿನದ ಕಾರ್ಯಕರ್ತರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ, ಪಡಿತರ ವ್ಯವಸ್ಥೆ, ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ನೀತಿ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ, ಬಡವರಿಗೆ ಮನೆ ಕಟ್ಟುವ ಯೋಜನೆಗಳು ಸೇರಿದಂತೆ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದಿವೆ ಎಂದರು.
ಮುಂದುವರೆದು, ಹಸಿರು ಕ್ರಾಂತಿ ಹಾಗೂ ಕ್ಷೀರ ಕ್ರಾಂತಿಯ ಮೂಲಕ ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿ, ಇತರ ದೇಶಗಳಿಗೆ ಆಹಾರ ರಫ್ತು ಮಾಡುವ ಮಟ್ಟಕ್ಕೆ ತಂದು ನಿಲ್ಲಿಸಿದ ಶ್ರೇಯಸ್ಸು ಕೂಡ ಕಾಂಗ್ರೆಸ್ ಪಕ್ಷಕ್ಕೇ ಸಲ್ಲುತ್ತದೆ. ರಾಜ್ಯದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕ್ಷೀರ ಭಾಗ್ಯ, ಅನ್ನಭಾಗ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಬದುಕಿಗೆ ನೆರವಾಗುತ್ತಿದೆ ಎಂದು ಹೇಳಿದರು.
೨೦೧೪ರಲ್ಲಿ ಅಚ್ಚೆ ದಿನ್ ಆಯೇಂಗೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸಲಿಲ್ಲ ಎಂದರು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ೭೫ ಸಾವಿರ ಕೋಟಿ ರೈತರ ಸಾಲವನ್ನು ಮನ್ನಾ ಮಾಡಿತ್ತು. ಆದರೆ ಪ್ರಧಾನಿ ಮೋದಿ ಅವರ ಸರ್ಕಾರ ಉದ್ಯಮಿಗಳಾದ ಅದಾನಿ ಮತ್ತು ಅಂಬಾನಿ ಅವರ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿಯವರು ಕೆಲಸ ಏನು ಮಾಡುವುದಿಲ್ಲ. ಕೇವಲ ಪ್ರಚಾರ ಮಾತ್ರ. ಸೋಶಿಯಲ್ ಮೀಡಿಯಾದಲ್ಲಂತೂ ಟೀಕೆ, ಸುಳ್ಳು ಪ್ರಚಾರಗಳನ್ನೇ ಬಿಜೆಪಿ ಮಾಡುತ್ತಾ ಬರುತ್ತಿದೆ ಎಂದರು.
ಬಳಿಕ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೋರಕೆ ಮಾತನಾಡಿ, ಕಳೆದ ೧೨ ವರ್ಷಗಳಲ್ಲಿ ಮೋದಿ ಸರ್ಕಾರ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ನಿಷ್ಕ್ರಿಯಗೊಳಿಸುವ ಕೆಲಸ ಮೋದಿ ಸರ್ಕಾರ ಮಾಡುತ್ತಿದೆ ಎಂದರು.
ಮನರೇಗಾ ಕಾರ್ಯಕ್ರಮ ಸಂವಿಧಾನ ಬದ್ಧವಾದ ನಮ್ಮ ಉದ್ಯೋಗದ ಹಕ್ಕು. ಅದನ್ನು ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರದ ಮೋದಿ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ ಪಕ್ಷ ದಿಲ್ಲಿಯಿಂದ ಹಳ್ಳಿಗೆ ಅಧಿಕಾರ ಕೊಟ್ಟರೆ ಬಿಜೆಪಿ ಪಕ್ಷ ಹಳ್ಳಿಯಿಂದ ಅಧಿಕಾರ ಕಿತ್ತು ದಿಲ್ಲಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದರು.
ನಂತರ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಮಾತನಾಡಿ, ರಾಮ ರಾಜ್ಯವಾಗಿದ್ದ ದೇಶವನ್ನು ಕಳೆದ ೧೨ ವರ್ಷಗಳಲ್ಲಿ ಸಮಾಜ ಒಡೆಯುವ ಕೆಲಸ ಮಾಡುವ ಮೂಲಕ ಬಿಜೆಪಿಯರು ರಾವಣ ರಾಜ್ಯವನ್ನಾಗಿ ಮಾಡಿದ್ದಾರೆ. ಅಧಿಕಾರಕ್ಕೆ ಬಂದಾಗ ನೂರು ದಿನದಲ್ಲಿ ಕಪ್ಪು ಹಣ ತಂದು ಎಲ್ಲರ ಖಾತೆಗೆ ೧೫ ಲಕ್ಷ ಹಾಕುತ್ತೇವೆಂದು ಭರವಸೆ ನೀಡಿ ಅದನ್ನು ಈಡೇರಿಸಲಿಲ್ಲ, ಪ್ರತಿ ವರ್ಷ ೨ ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂಬ ಭರವಸೆ ಇನ್ನೂ ಈಡೇರಿಲ್ಲ ಎಂದರು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕಧೊಂಡ, ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೊಜಕ ಶರಣಪ್ಪ ಕೊಟಗಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಸರಪರಾಜ ಮಿರ್ದೆ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ರಾಜು ಆಲಗೂರ, ಅಬ್ದುಲ್ ಹಮೀದ ಮುಶ್ರೀಫ್, ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ ಮತ್ತಿತರರು ಉಪಸ್ಥಿತರಿದ್ದರು.



