ತುಮಕೂರು : ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ.50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಸ್ಥಾನಮಾನಗಳನ್ನು ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅವಕಾಶಗಳನ್ನು ನೀಡಲಾಯಿತು. ಅದರಿಂದ ಇದೀಗ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಸಿಕ್ಕಿದೆ.
ಅಲ್ಲದೆ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಸಂಸತ್ತಿನಲ್ಲೂ ಶೇ.50 ರಷ್ಟು ಅವಕಾಶ ಕಲ್ಪಿಸುವ ಮಹಿಳಾ ಮಸೂದೆಯನ್ನು ಮಂಡಿಸಲಾಯಿತು. ಆ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅದು ಅನುಮೋದನೆ ಆಗಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಅನುಮೋದಿಸಿ ಮಹಿಳೆಗೆ ಶಕ್ತಿ ನೀಡಬೇಕು ಎಂದರು.
ಬಳಿಕ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಯಾರೂ ಅವಕಾಶಗಳನ್ನು ಕಾದು ಕೂರುವುದು ಸರಿಯಲ್ಲ. ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು. ವಿಶೇಷವಾಗಿ ಮಹಿಳೆಯವರು ಅತಿದೊಡ್ಡ ಜವಾಬ್ದಾರಿ ಹೊಂದಿರುತ್ತಾರೆ. ಮನೆಯ ಒಳಗೆ ಮತ್ತು ಹೊರಗೆ ದುಡಿಯಬೇಕಾಗುತ್ತದೆ. ಈ ನಡುವೆ ತಮ್ಮ ಆರೋಗ್ಯವನ್ನೂ ನೋಡಿಕೊಳ್ಳಬೇಕು ಎಂದರು.
ನಂತರ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸಾ ಅವರು ಮಾತನಾಡಿ, ಮಹಿಳೆ ಪುರುಷರಿಗೆ ಸ್ಪರ್ಧಿಯಾಗುವುದು ಬೇಡ. ಮಹಿಳೆಯೇ ತಮ್ಮ ಆತ್ಮಸಂತೋಷಕ್ಕಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಿದೆ. ಇಂದಿನ ದಿನಗಳಲ್ಲಿ ಮಹಿಳೆಯರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲರಾಗಿದ್ದಾರೆ. ಆದರೆ ಆರ್ಥಿಕ ಸ್ವಾವಲಂಬನೆಯನ್ನು ಅನುಭವಿಸುವ ಹಕ್ಕನ್ನು ಜಯಿಸಿಕೊಳ್ಳಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಬಿ.ವಿ.ಅಶ್ವಿಜ, ಎಸ್.ಪಿ. ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಶುಭ ಸಿ., ಶಾರದಾ, ಸೌಮ್ಯ, ಡಾ.ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.



