Thursday, May 14, 2026
Google search engine

Homeರಾಜಕೀಯನೀಟ್ ಪರೀಕ್ಷೆ ರದ್ದು ಯುವಜನತೆಗೆ ದ್ರೋಹ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ನೀಟ್ ಪರೀಕ್ಷೆ ರದ್ದು ಯುವಜನತೆಗೆ ದ್ರೋಹ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಮರುಪರೀಕ್ಷೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿರುವುದು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ಯುವಜನತೆಗೆ ಮಾಡಿದ ಕ್ರೂರ ದ್ರೋಹ ಎಂದು ಸಿಎಂ ಕಿಡಿಕಾರಿದ್ದಾರೆ. ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಪರೀಕ್ಷೆ ಬರೆದಿದ್ದು, ಪೋಷಕರು ಸಹ ಭಾರೀ ವೆಚ್ಚ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ ಎಂದು ಹೇಳಿದರು.

2024ರಲ್ಲೇ ನೀಟ್ ಪರೀಕ್ಷೆ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ ಎಂದು ರಾಜ್ಯ ಸರ್ಕಾರ ಸದನದಲ್ಲಿ ನಿರ್ಣಯ ಕೈಗೊಂಡಿತ್ತು. ಈಗಿನ ಬೆಳವಣಿಗೆ ಆ ಆತಂಕ ಸತ್ಯವಾಗಿರುವುದನ್ನು ಸಾಬೀತುಪಡಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನೇಮಕಾತಿ ಹಾಗೂ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳಲ್ಲಿ ನಿರಂತರ ಪೇಪರ್ ಲೀಕ್ ಪ್ರಕರಣಗಳು ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಆರೋಪಿಸಿದ ಅವರು, ಈ ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular