ಬೆಂಗಳೂರು : ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಹಾಗೂ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಯುವಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಕರ್ನಾಟಕದಿಂದಲೇ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ತಿಂಗಳಗಟ್ಟಲೆ ಶ್ರಮಪಟ್ಟು ಸಿದ್ಧತೆ ಮಾಡಿಕೊಂಡಿದ್ದರು. ಪೋಷಕರು ಕೋಚಿಂಗ್, ಪ್ರಯಾಣ ಹಾಗೂ ಇತರ ವೆಚ್ಚಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾರೆ. ಈಗ ಪರೀಕ್ಷೆ ರದ್ದುಗೊಂಡಿರುವುದರಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪಾರದರ್ಶಕ ಹಾಗೂ ನಿಗದಿತ ಅವಧಿಯೊಳಗಿನ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ತಕ್ಷಣ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಪ್ರವೇಶ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಮತ್ತೆ ರಾಜ್ಯಗಳಿಗೆ ಹಿಂತಿರುಗಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ನಿರ್ವಹಣೆಯಲ್ಲಿ ಪದೇಪದೇ ಉಂಟಾಗುತ್ತಿರುವ ಲೋಪಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು.



