ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಸಿರಿಗೆರೆ ಮಠದ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ನಡೆದ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕಾನೂನು ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಯನ್ನು ಕ್ರೂರವಾಗಿ ಥಳಿಸಿದ್ದ ಆರೋಪಿ ರವಿಚಂದ್ರ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ.
ಹಾಸ್ಟೆಲ್ ಕೋಣೆಯೊಳಗೆ ವಿದ್ಯಾರ್ಥಿಯೊಬ್ಬನನ್ನು ಕೂರಿಸಿ ಮನಬಂದಂತೆ ಥಳಿಸುತ್ತಿದ್ದ ದೃಶ್ಯದ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಇನ್ನು ಪ್ರಕರಣದ ಗಂಭೀರತೆಯನ್ನು ಅರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಎಚ್ಚೆತ್ತುಕೊಂಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಹಾಗೂ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅರುಣ್ ನಾಗೇಗೌಡ ಅವರು ಸಿರಿಗೆರೆ ಮಠದ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲ್ಲೆಗೊಳಗಾದ ವಿದ್ಯಾರ್ಥಿ ಹಾಗೂ ಸಿಬ್ಬಂದಿಯಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಂಜುನಾಥ್ ಅವರು ಭರಮಸಾಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದರು. ದೂರಿನ ಆಧಾರದ ಮೇಲೆ ಮಕ್ಕಳ ರಕ್ಷಣಾ ಕಾಯ್ದೆಯಡಿ ಆರೋಪಿ ರವಿಚಂದ್ರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಮಕ್ಕಳ ಮೇಲಿನ ಇಂತಹ ದೌರ್ಜನ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



