Wednesday, May 27, 2026
Google search engine

Homeರಾಜ್ಯನೀಟ್ ದುರಂತಕ್ಕೆ ಕೇಂದ್ರವೇ ಹೊಣೆ ; ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲಿ : ಸಚಿವ ಶರಣಪ್ರಕಾಶ್...

ನೀಟ್ ದುರಂತಕ್ಕೆ ಕೇಂದ್ರವೇ ಹೊಣೆ ; ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಲಿ : ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಅನ್ಯಾಯವಾಗಿದ್ದು, ಈಗ ಅವರು ಮತ್ತೆ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೆ ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಇದೇ ಮೊದಲ ಘಟನೆ ಅಲ್ಲ ಎಂದು ಹೇಳಿದ ಸಚಿವರು, ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಾರ್ಯವೈಖರಿ ಕುರಿತು ಸುಪ್ರೀಂ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದರು.

‌ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಗಳ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಒತ್ತಾಯಿಸಿದರಲ್ಲದೆ, ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪ್ರಕ್ರಿಯೆ ಕುರಿತು ನಿಗದಿತ ವೇಳಾಪಟ್ಟಿಯಂತೆ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ವೈದ್ಯಕೀಯ ಸೀಟು ದೊರೆತಲ್ಲಿ ಈಗಾಗಲೇ ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ಹಿಂತಿರುಗಿಸಲು ಸೂಚಿಸಲಾಗಿದೆ ಎಂದರು.

ನೀಟ್ ಮರುಪರೀಕ್ಷೆ ಹಿನ್ನೆಲೆಯಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೊದಲ ಅವಧಿಯ ತರಗತಿಗಳು ಸ್ವಲ್ಪ ತಡವಾಗುವ ಸಾಧ್ಯತೆ ಇದ್ದರೂ, ತಾಂತ್ರಿಕ ಶಿಕ್ಷಣ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳು ನಿಗದಿತ ವೇಳಾಪಟ್ಟಿಯಂತೆ ಆರಂಭವಾಗಲಿವೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ ಸಚಿವರು, National Medical Commission ರಾಜ್ಯದ ವಿವಿಧ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 550 ಪದವಿ ಹಾಗೂ 572 ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದರು.

11 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 550 ವೈದ್ಯಕೀಯ ಪದವಿ ಸೀಟುಗಳು ಹೆಚ್ಚಳವಾಗಿದ್ದು, ಕೊಪ್ಪಳ ಮತ್ತು ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ತಲಾ 50 ಹೆಚ್ಚುವರಿ ಸೀಟುಗಳು ದೊರೆತಿವೆ. ಅದೇ ರೀತಿ ರಾಜ್ಯದ 23 ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟು 572 ಸ್ನಾತಕೋತ್ತರ ಸೀಟುಗಳ ಹೆಚ್ಚಳಕ್ಕೂ ಅನುಮತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 158 ಸ್ನಾತಕೋತ್ತರ ಹಾಗೂ 100 ಪದವಿ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

RELATED ARTICLES
- Advertisment -
Google search engine

Most Popular