Thursday, May 28, 2026
Google search engine

Homeರಾಜಕೀಯಡಿಕೆ ಶಿವಕುಮಾರ್ ಮುಂದಿನ ಸಿಎಂ : ಸಚಿವರ ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಡಿಕೆ ಶಿವಕುಮಾರ್ ಮುಂದಿನ ಸಿಎಂ : ಸಚಿವರ ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದು, ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾಗೂ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಸಚಿವರ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಸಚಿವರೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ನಡೆದ ಉಪಾಹಾರ ಸಭೆ ಹಲವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು. ಸಭೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು, ಬಳಿಕ ಇಬ್ಬರೂ ಆತ್ಮೀಯವಾಗಿ ಆಲಿಂಗನ ಮಾಡಿಕೊಂಡರು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಂದು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು. ರಾಜ್ಯಪಾಲರು ಲಭ್ಯವಿಲ್ಲದಿದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡುವುದಾಗಿ ಹೇಳಿದರು.

ಇದೇ ವೇಳೆ ಭಾವುಕರಾದ ಸಿದ್ದರಾಮಯ್ಯ ಅವರು, ತಮ್ಮ ಆಡಳಿತಾವಧಿಯಲ್ಲಿ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ ತೃಪ್ತಿ ಇದೆ. ಮುಂದೆಯೂ ಜನರಿಗೆ ಉತ್ತಮ ಯೋಜನೆಗಳನ್ನು ನೀಡಬೇಕು ಹಾಗೂ ವಿರೋಧ ಪಕ್ಷದ ರಾಜಕೀಯ ನಡೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಚಿವರಿಗೆ ಸಲಹೆ ನೀಡಿದರು.

ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಿಸಿದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಇಲ್ಲಿವರೆಗೆ ಬಂದಿದ್ದು, ಸಚಿವರು ಮತ್ತು ಶಾಸಕರ ಸಹಕಾರದಿಂದಲೇ ಸಾಧ್ಯವಾಗಿದೆ ಎಂದರಲ್ಲದೆ, ಮುಂದೆಯೂ ಇದೇ ರೀತಿಯ ಸಹಕಾರ ಮುಂದುವರಿಯಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಅವರ ಆಡಳಿತವನ್ನು ಡಿ.ಕೆ.ಶಿವಕುಮಾರ್ ಮೆಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಸಭೆಯ ನಂತರ ಇಬ್ಬರು ನಾಯಕರು ಪರಸ್ಪರ ಅಭಿನಂದನೆ ಸಲ್ಲಿಸಿದ್ದು, ಅವರ ಆಲಿಂಗನದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, “ಅಂದು, ಇಂದು, ಎಂದೆಂದಿಗೂ… ಒಗ್ಗಟ್ಟೇ ನಮ್ಮ ಶಕ್ತಿ, ಜನಸೇವೆಯೇ ನಮ್ಮ ಬದ್ಧತೆ” ಎಂದು ಬರೆದುಕೊಂಡಿದೆ.






RELATED ARTICLES
- Advertisment -
Google search engine

Most Popular