Wednesday, July 8, 2026
Google search engine

Homeರಾಜ್ಯಸುದ್ದಿಜಾಲಜಿಲ್ಲೆಯಲ್ಲಿ ಕಬ್ಬು ನುರಿಯುವಿಕೆ ಶೀಘ್ರ ಆರಂಭ; ಮುಂಗಾರು ವೈಪರೀತ್ಯ ಹಿನ್ನೆಲೆ ಪರ್ಯಾಯ ಬೆಳೆಗೆ ಜಿಲ್ಲಾಧಿಕಾರಿಗಳ ಸಲಹೆ

ಜಿಲ್ಲೆಯಲ್ಲಿ ಕಬ್ಬು ನುರಿಯುವಿಕೆ ಶೀಘ್ರ ಆರಂಭ; ಮುಂಗಾರು ವೈಪರೀತ್ಯ ಹಿನ್ನೆಲೆ ಪರ್ಯಾಯ ಬೆಳೆಗೆ ಜಿಲ್ಲಾಧಿಕಾರಿಗಳ ಸಲಹೆ

ಮಂಡ್ಯ: ಮುಂಗಾರು ಹಂಗಾಮು, ಕಬ್ಬು ಬೆಳೆಗಾರರ ಸಮಸ್ಯೆಗಳು, ನೀರಿನ ಲಭ್ಯತೆ, ಬೆಳೆ ವಿಮೆ ಹಾಗೂ ರೈತರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಜಿಲ್ಲಾಡಳಿತ ಆಯೋಜಿಸಿದ್ದ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರು ತಮ್ಮ ಸಮಸ್ಯೆಗಳು ಮತ್ತು ಸಲಹೆಗಳನ್ನು ಅಧಿಕಾರಿಗಳ ಮುಂದಿಟ್ಟರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು ರೈತರ ಹಿತಾಸಕ್ತಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಇಲ್ಲ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಸುಮಾರು 30 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, ರೈತರಿಗೆ ಅಗತ್ಯ ಕೃಷಿ ಪರಿಕರಗಳ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲಿ ಈ ವಾರದಿಂದಲೇ ಕಬ್ಬು ನುರಿಯುವ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದ ಪಾಲಿನ ಪ್ರತಿ ಟನ್‌ಗೆ ₹50 ಪ್ರೋತ್ಸಾಹಧನಕ್ಕಾಗಿ ಈಗಾಗಲೇ ₹10.30 ಕೋಟಿ ಬಿಡುಗಡೆ ಮಾಡಲಾಗಿದೆ. ಕಾರ್ಖಾನೆಗಳ ಪಾಲಿನ ಮೊತ್ತ ಪಾವತಿಗೆ ನ್ಯಾಯಾಲಯದಲ್ಲಿ ಪ್ರಕರಣ ಇರುವ ಹಿನ್ನೆಲೆಯಲ್ಲಿ, ರೈತರ ಹಿತದೃಷ್ಟಿಯಿಂದ ಪ್ರಕರಣ ಹಿಂಪಡೆದು ಶೀಘ್ರ ಹಣ ಪಾವತಿಸುವಂತೆ ಮನವಿ ಮಾಡಲಾಗಿದೆ.

ಆಗಸ್ಟ್ ಮೊದಲ ವಾರದವರೆಗೆ ಬಿತ್ತನೆಗೆ ಅವಕಾಶ ಇರುವುದರಿಂದ ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪರ್ಯಾಯ ಬೆಳೆ ಯೋಜನೆ ರೂಪಿಸಿ ರೈತರಿಗೆ ಜಾಗೃತಿ ಮೂಡಿಸಲು ಕೃಷಿ ಇಲಾಖೆಗೆ ಸೂಚಿಸಲಾಗಿದೆ. ಜೊತೆಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಸದ್ಯಕ್ಕೆ ಕೃಷಿಗೆ ನೀರು ಹರಿಸಲು ಸಾಧ್ಯವಿಲ್ಲ. ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೇ ಬಳಸಲಾಗುತ್ತಿದ್ದು, 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ರೈತರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಹೆಚ್ಚಿನ ರೈತರು ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸುಮಾರು 11 ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಅಲ್ಲದೆ ರೈತರಿಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ತಲಾ ಏಳು ಗಂಟೆಗಳ ನಿರಂತರ ವಿದ್ಯುತ್ ಪೂರೈಕೆಗೆ, ವಿಶೇಷವಾಗಿ ಬೆಳಗಿನ ಅವಧಿಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular