ಮಂಡ್ಯ: ಕೊಡಗು ಹಾಗೂ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ 83 ಅಡಿ ದಾಟಿದ್ದು, ಮೈಸೂರು, ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ರೈತರು ಹಾಗೂ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸಿದೆ.
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಪ್ರಸ್ತುತ 83.64 ಅಡಿಗೆ ನೀರು ತಲುಪಿದೆ. ಜಲಾಶಯಕ್ಕೆ 7,531 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 790 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 12.485 ಟಿಎಂಸಿ ನೀರು ಸಂಗ್ರಹವಾಗಿದೆ.
ಇತ್ತ ಮಲೆನಾಡಿನಲ್ಲಿ ಉತ್ತಮ ಮಳೆಯಿಂದ ತುಂಗಾ ಜಲಾಶಯ ಭರ್ತಿಯಾಗಿದ್ದು, ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಹರಿಯುತ್ತಿದೆ. ಇದರಿಂದ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಭಾಗಗಳ ಕೆರೆಗಳಿಗೆ ಮತ್ತೆ ನೀರು ಪೂರೈಕೆ ಆರಂಭವಾಗಿದ್ದು, ರೈತರಲ್ಲಿ ಸಂತಸ ಮೂಡಿದೆ.
ಅದೇ ವೇಳೆ ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ನದಿಯ ಒಳಹರಿವು 1 ಲಕ್ಷ ಕ್ಯೂಸೆಕ್ ಸಮೀಪ ತಲುಪಿದೆ. ಇದರ ಪರಿಣಾಮ ಆಲಮಟ್ಟಿ ಜಲಾಶಯಕ್ಕೂ ಹೆಚ್ಚಿನ ನೀರು ಹರಿದುಬರುತ್ತಿದ್ದು, ಉತ್ತರ ಕರ್ನಾಟಕದ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.



