Sunday, July 12, 2026
Google search engine

Homeರಾಜ್ಯಕನ್ನಡ ಶಿಕ್ಷಕರಿಗೆ ಮರಾಠಿಯಲ್ಲೇ TET ಕಡ್ಡಾಯ : ಮಹಾರಾಷ್ಟ್ರ ಸರ್ಕಾರದ ಕ್ರಮ ಖಂಡಿಸಿದ ಕೆವಿಎಸ್

ಕನ್ನಡ ಶಿಕ್ಷಕರಿಗೆ ಮರಾಠಿಯಲ್ಲೇ TET ಕಡ್ಡಾಯ : ಮಹಾರಾಷ್ಟ್ರ ಸರ್ಕಾರದ ಕ್ರಮ ಖಂಡಿಸಿದ ಕೆವಿಎಸ್

ಹುಬ್ಬಳ್ಳಿ : ಕನ್ನಡ ಮಾಧ್ಯಮದ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯನ್ನು ಮರಾಠಿ ಭಾಷೆಯಲ್ಲೇ ಬರೆಯುವುದನ್ನು ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ (ಕೆವಿಎಸ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿರುವ ಸಂಘ, ಮಹಾರಾಷ್ಟ್ರ ಸರ್ಕಾರದ ಕ್ರಮವು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (NCTE) ನಿಯಮಗಳಿಗೆ ವಿರುದ್ಧವಾಗಿದ್ದು, ಗಡಿ ಭಾಗದ ಕನ್ನಡ ಶಿಕ್ಷಣವನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದು, ಈ ನಿರ್ಧಾರವು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕನ್ನಡ ಭಾಷಿಕ ಶಿಕ್ಷಕರ ವಿರುದ್ಧದ ತಾರತಮ್ಯವಾಗಿದೆ ಎಂದು ಸಂಘ ಖಂಡಿಸಿದೆ.

ಕರ್ನಾಟಕದಲ್ಲಿ ಮರಾಠಿ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಮರಾಠಿ ಭಾಷೆಯಲ್ಲೇ ಬರೆಯಲು ಅವಕಾಶವಿರುವಂತೆಯೇ, ಮಹಾರಾಷ್ಟ್ರದಲ್ಲೂ ಕನ್ನಡ ಮಾಧ್ಯಮ ಶಿಕ್ಷಕರಿಗೆ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕಿತ್ತು. ಆದರೆ, ಮರಾಠಿಯಲ್ಲೇ ಪರೀಕ್ಷೆ ಕಡ್ಡಾಯಗೊಳಿಸಿರುವುದು ಕನ್ನಡ ಭಾಷೆ ಹಾಗೂ ಶಿಕ್ಷಣವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಸಂಘ ಆರೋಪಿಸಿದೆ.

ಈ ವಿಷಯವಾಗಿ ಕರ್ನಾಟಕ ಸರ್ಕಾರ ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಸಂಘ ಹೇಳಿದೆ. ಮಹಾರಾಷ್ಟ್ರ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯದಿದ್ದರೆ ಗಡಿ ಭಾಗದ ಕನ್ನಡಿಗರು ತೀವ್ರ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘ ಎಚ್ಚರಿಕೆ ನೀಡಿದೆ.

ಜತೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ವಿಷಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕನ್ನಡ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದೆ. ಅಲ್ಲದೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡ ಈ ವಿಷಯದಲ್ಲಿ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಆಗ್ರಹಿಸಿದೆ.

RELATED ARTICLES
- Advertisment -
Google search engine

Most Popular