ಬೆಂಗಳೂರು : ರಾಜ್ಯ ರಾಜಧಾನಿಯ ಎರಡನೇ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲೇ ನಿರ್ಮಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಎರಡನೇ ವಿಮಾನ ನಿಲ್ದಾಣ ಕುರಿತು ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದುವರೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿದ್ದು, ಊರುಗಳನ್ನು ಸ್ಥಳಾಂತರಿಸುವ ಅಗತ್ಯ ಬಾರದಂತೆ, ಗುಡ್ಡಗಾಡು ಪ್ರದೇಶಗಳಲ್ಲದ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ಹಾಗೂ ಕಡಿಮೆ ಭೂಮಿ ಅಗತ್ಯವಿರುವ ಸ್ಥಳವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಂತಿಮವಾಗಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಯಾವ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಬೆಂಗಳೂರು ದಕ್ಷಿಣ ಭಾಗದಲ್ಲೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆಯಿದ್ದು, ಇದುವರೆಗೆ ಬಂದಿರುವ ಎಲ್ಲಾ ಪ್ರಮುಖ ಪ್ರಸ್ತಾವನೆಗಳೂ ದಕ್ಷಿಣ ಭಾಗಕ್ಕೇ ಸಂಬಂಧಿಸಿವೆ. ಭೂಮಿ ಬೆಲೆ ಕಡಿಮೆ ಇರಬೇಕು ಹಾಗೂ ಸರ್ಕಾರದ ಮೇಲೆ ಆರ್ಥಿಕ ಹೊರೆ ಕಡಿಮೆ ಆಗುವಂತೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.



