ಕಲಬುರಗಿ : ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ವಿರೋಧ ಸ್ಪಷ್ಟವಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಯೋಜನೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ರೈತರ ಆಕ್ರೋಶವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಯೋಜನೆಗಾಗಿ ಸಮೀಕ್ಷೆ ನಡೆಸಲು ತೆರಳಿದ್ದ ಅಧಿಕಾರಿಗಳ ವಾಹನಗಳನ್ನು ರೈತರು ಸುತ್ತುವರಿದು ಪ್ರತಿಭಟನೆ ನಡೆಸಿದ್ದಾರೆ. ಸಮೀಕ್ಷಾ ತಂಡವನ್ನು ಹಿಂದಕ್ಕೆ ಕಳುಹಿಸಿರುವುದು ರೈತರು ಯೋಜನೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ವಿಜಯೇಂದ್ರ ಹೇಳಿದರು.
ಬಿಡದಿಯಲ್ಲಿ ಟೌನ್‌ಶಿಪ್ ಹೆಸರಿನಲ್ಲಿ ಸರ್ಕಾರ ರಿಯಲ್ ಎಸ್ಟೇಟ್ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ ಅವರು, ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಪ್ರವಾಸದ ಬಗ್ಗೆಯೂ ವಿಜಯೇಂದ್ರ ಟೀಕಿಸಿದರು.
ಮುಖ್ಯಮಂತ್ರಿಯವರ ಪ್ರವಾಸ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಈ ಪ್ರವಾಸದಿಂದ ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ಅವರು ಜನರಿಗೆ ತಿಳಿಸಬೇಕು. ಬಸವಕಲ್ಯಾಣಕ್ಕೆ ತೆರಳಿ ಅನುಭವ ಮಂಟಪ ವೀಕ್ಷಿಸಿ, ಛಾಯಾಚಿತ್ರ ತೆಗೆಸಿಕೊಂಡರು. ಬೀದರ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೇವಲ ಪ್ರದರ್ಶನದ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಮರಳಿದ್ದಾರೆ ಎಂದು ವ್ಯಂಗ್ಯವಾಡಿದರು.



