Tuesday, July 14, 2026
Google search engine

Homeರಾಜ್ಯCWMA ಸಭೆ ಬಳಿಕ ಸಿಎಂ ಜೊತೆ ಚರ್ಚಿಸಿ ನಾಲೆಗಳಿಗೆ ನೀರು: ರಾಜಕೀಯ ಬೇಡ – ಎನ್....

CWMA ಸಭೆ ಬಳಿಕ ಸಿಎಂ ಜೊತೆ ಚರ್ಚಿಸಿ ನಾಲೆಗಳಿಗೆ ನೀರು: ರಾಜಕೀಯ ಬೇಡ – ಎನ್. ಚಲುವರಾಯಸ್ವಾಮಿ

ಬೆಂಗಳೂರು/ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಸಬೇಕೆಂಬ ರೈತರ ಬೇಡಿಕೆ ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಕಷ್ಟದ ಸಮಯದಲ್ಲಿ ರೈತರ ಪರವಾಗಿ ನಿಲ್ಲುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಜವಾಬ್ದಾರಿಯಾಗಿದ್ದು, ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು.

ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಬೆಳೆ ಉಳಿಸುವ ಜತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ಈ ವಿಷಯದ ಕುರಿತು ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು ಈಗಾಗಲೇ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿದ್ದು, ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

CWMA ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಕರ್ನಾಟಕದ ವಾಸ್ತವ ಪರಿಸ್ಥಿತಿ, ಕುಡಿಯುವ ನೀರಿನ ಅಗತ್ಯತೆ ಹಾಗೂ ಬೆಳೆಗಳ ಸ್ಥಿತಿಗತಿಯನ್ನು ಸಮರ್ಪಕವಾಗಿ ಮಂಡಿಸಲಿದ್ದಾರೆ. ಸಭೆಯ ತೀರ್ಮಾನವನ್ನು ಆಧರಿಸಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ನೀರು ಬಿಡುಗಡೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕೆಆರ್‌ಎಸ್ ಜಲಾಶಯ ಭರ್ತಿಯಾಗುವ ನಿರೀಕ್ಷೆಯೂ ಇದೆ. ರೈತರು ಯಾವುದೇ ಕಾರಣಕ್ಕೂ ಧೃತಿಗೆಡದೆ ಸರ್ಕಾರದೊಂದಿಗೆ ಸಹಕರಿಸಬೇಕು. ಇದು ರೈತರ ಬದುಕಿನ ಪ್ರಶ್ನೆಯಾಗಿರುವುದರಿಂದ ಈ ಸೂಕ್ಷ್ಮ ವಿಚಾರದಲ್ಲಿ ಯಾವುದೇ ಪಕ್ಷ ರಾಜಕೀಯ ಮಾಡಬಾರದು ಎಂದು ಎನ್. ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular