ಬೆಂಗಳೂರು : ರಾಜ್ಯದಲ್ಲಿ 6,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿರುವ ವಿಚಾರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಆರ್. ಅಶೋಕ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಯೋಜನೆಗೆ ಸಾರ್ವಜನಿಕ ಹಣ ಬಳಕೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದು ಕರ್ನಾಟಕದ ತೆರಿಗೆದಾರರ ಹಣವೋ ಅಥವಾ ಕಾಂಗ್ರೆಸ್ ಪಕ್ಷದ ನಿಧಿಯೋ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಕಾಂಗ್ರೆಸ್‌ನ ರಾಜಕೀಯ ಪ್ರಚಾರದ ಭಾಗವಾಗಿದೆ ಎಂದು ಟೀಕಿಸಿದ್ದಾರೆ.
ಈ ಹಿಂದೆ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸಲು ಸರ್ಕಾರದ ಬೊಕ್ಕಸ ಬಳಸಲಾಗಿದೆ ಎಂದು ಆರೋಪಿಸಿದ್ದ ಅಶೋಕ್, ಇದೀಗ ಸಾಮಾಜಿಕ ಸಾಮರಸ್ಯ ಮತ್ತು ಸಂವಿಧಾನದ ಮೌಲ್ಯಗಳ ಹೆಸರಿನಲ್ಲಿ ಪಕ್ಷದ ಹಿತಾಸಕ್ತಿಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ದೂರಿದ್ದಾರೆ. ರಾಜ್ಯದ ಬೊಕ್ಕಸವು ಯಾವುದೇ ಪಕ್ಷದ ಖಾಸಗಿ ನಿಧಿಯಲ್ಲ ಎಂದು ಹೇಳಿರುವ ಅವರು, ರಾಜಕೀಯ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ತನ್ನ ಸ್ವಂತ ಹಣ ಬಳಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆರೋಪಿಸಿದ ಅಶೋಕ್, ರೈತರು ಸಂಕಷ್ಟದಲ್ಲಿದ್ದಾರೆ, ಮೂಲಸೌಕರ್ಯ ಸಮಸ್ಯೆಗಳು ಹೆಚ್ಚಾಗಿವೆ ಮತ್ತು ಹಲವು ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಎದುರಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕಕ್ಕೆ ಪ್ರಸ್ತುತ ಅಗತ್ಯವಿರುವುದು ಸುಭದ್ರ ಆಡಳಿತವೇ ಹೊರತು, ರಾಜಕೀಯ ಚಟುವಟಿಕೆಗಳಿಗೆ ಸಾರ್ವಜನಿಕ ಹಣದ ಬಳಕೆ ಅಲ್ಲ ಎಂದು ಆರ್. ಅಶೋಕ್ ಸರ್ಕಾರವನ್ನು ಟೀಕಿಸಿದ್ದಾರೆ.



