Thursday, May 22, 2025
Google search engine

HomeUncategorizedತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಮಡಿಕೇರಿ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ ೧ ಗಂಟೆ ೨೭ ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ. ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ರಾತ್ರಿ ೧ ಗಂಟೆ ೨೭ ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ ೪ ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ಇಂದು ಸಂಜೆ ೪ ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‌ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ. ಆದರೆ ಕಳೆದೆರಡು ದಿನಗಳಿಂದ ಮಧ್ಯಾಹ್ನದ ವೇಳೆ ತಲಕಾವೇರಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಹಾಗಾಗಿ ತೀರ್ಥೋದ್ಭವದ ವೇಳೆ ಮಳೆ ಬಂದರೆ ಸ್ವಲ್ಪ ಸಮಸ್ಯೆಯಾಗುವ ಸಾಧ್ಯತೆ ಇದೆ. ಜೀವನದಿ ತೀರ್ಥ ರೂಪದಲ್ಲಿ ದರ್ಶನ ನೀಡುವ ಈ ವಿಸ್ಮಯ ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವ ಎನ್ ಬೋಸರಾಜು, ಕಾವೇರಿಕೊಳ್ಳದ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

RELATED ARTICLES
- Advertisment -
Google search engine

Most Popular