ಬಳ್ಳಾರಿ: ವೈದ್ಯಾಧಿಕಾರಿಗಳು ಸಮುದಾಯಕ್ಕೆ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ರಾಜಿ ಮಾಡಿಕೊಳ್ಳದೆ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ವೈದ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಹೆಚ್ಚಿನ ಜೀವನಶೈಲಿ ರೋಗಗಳ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಆರೋಗ್ಯ ಕರ್ನಾಟಕ ಯೋಜನೆಯು ಬಿಪಿಎಲ್ ಕುಟುಂಬಗಳಿಗೆ 5 ಲಕ್ಷದವರೆಗೆ ಮತ್ತು ಒಂದೂವರೆ ಲಕ್ಷದವರೆಗೆ ಎಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಭರಿಸುತ್ತಿದೆ, ಇದರ ಅನುಕೂಲಕ್ಕಾಗಿ ಜನರಿಗೆ ಹೆಚ್ಚಿನ ಅರಿವು ಮೂಡಿಸಲು ಹೇಳಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವವರು ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಹೆರಿಗೆಗೆ ಹೃದಯಪೂರ್ವಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಪ್ರಸ್ತುತ ರಾಜ್ಯಾದ್ಯಂತ ಅಂಗಾಂಗ ದಾನ ಅಭಿಯಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೆಚ್ಚಿನ ಅಭಿಯಾನಗಳು ನಡೆಯುತ್ತಿದ್ದು, ಅಧಿಕಾರಿಗಳು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವಂತೆ ಮನವಿ ಮಾಡಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮೀಣ ಮಟ್ಟದ ಎಲ್ಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಅಗತ್ಯವಿದ್ದಲ್ಲಿ ಸೂಕ್ತ ಕ್ರಿಯಾ ಯೋಜನೆಯೊಂದಿಗೆ ಚರ್ಚಿಸಲು ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಇಲಾಖೆಯಲ್ಲಿ ಕೈಗೊಂಡಿರುವ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಕ್ರಮದ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಮುಖ್ಯ ಆಡಳಿತ ವೈದ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.