ಬಳ್ಳಾರಿ: ರಾಜ್ಯದಲ್ಲಿ ಇಂದಿಗೂ ಬಾಲಕಾರ್ಮಿಕ ಪದ್ಧತಿ ಜಾರಿಯಾಗುತ್ತಿರುವುದು ಬೇಸರದ ಸಂಗತಿ, ಸರಕಾರ ಸಾಕಷ್ಟು ಮಕ್ಕಳಿಗೆ ಸೌಲಭ್ಯ ಕಲ್ಪಿಸಿದ್ದರೂ ಮಕ್ಕಳನ್ನು ಕೂಲಿ ಕೆಲಸಕ್ಕೆ ಕಳುಹಿಸುವುದು ಕಾನೂನು ಪ್ರಕಾರ ಅಪರಾಧ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ ಎನ್.ಹೊಸಮನಿ ಹೇಳಿದರು.
ಮಹಮ್ಮದೀಯ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನ ಹಾಗೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ದುಡಿಮೆ ಮಾಡುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂವಿಧಾನದಲ್ಲಿ ಮಕ್ಕಳಿಗೆ ಹಕ್ಕುಗಳನ್ನು ನೀಡಲಾಗಿರುವುದರಿಂದ, ಆ ಹಕ್ಕುಗಳನ್ನು ಅನುಭವಿಸಲು ಪೈಷರ್‌ಗಳು ಮತ್ತು ಮಾಲೀಕರು ಸಹಕರಿಸಬೇಕು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಬಿ.ಉಮಾದೇವಿ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವುದು ನಮ್ಮ ಇಲಾಖೆಯ ಜವಾಬ್ದಾರಿಯಾಗಿದ್ದು ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳಿಗಾಗಿಯೇ ಇಲಾಖೆಯಲ್ಲಿ ವಸತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗ ಮಾಡಿಕೊಳ್ಳಬೇಕು. ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಪಡೆದು ಬದುಕು ಹಸನಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಮಿಕ ಅಧಿಕಾರಿ ಕಮಾಲ್ ಅಲ್ತಾಫ್ ಅಹಮದ್ ಮಾತನಾಡಿ, ಜಿಲ್ಲೆಯಲ್ಲಿ ದುಡಿಯುತ್ತಿರುವ ಬಾಲಕಾರ್ಮಿಕ ಮಕ್ಕಳ ಆಯಸ್ಸು ಕುರಿತು ಜಿಲ್ಲಾ ಹಾಗೂ ತಾಲೂಕು ಟಸಲ್ ಪೀಸರ್ಸ್ ಸಮಿತಿಗಳ ಮೂಲಕ ನಿರಂತರವಾಗಿ ಕಾರ್ಯಾಚರಣೆ ನಡೆಸಿ, ಬಹುತೇಕ ಬಾಲಕಾರ್ಮಿಕ ಮಕ್ಕಳನ್ನು ಸಂರಕ್ಷಿಸಿ ಪುನರ್ವಸತಿ ಕಲ್ಪಿಸಲಾಗಿದ್ದು, ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಿವಿ ಮಾತು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ತ್ರಿವೇಣಿ ಪತ್ತಾರ ಅವರು ಮಕ್ಕಳಿಗಾಗಿ ಇರುವ ಕಾನೂನುಗಳು, ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯಿದೆ, ಬಾಲ್ಯವಿವಾಹ ಕಾಯಿದೆ, ಪಿಕ್ಸೋ ಕಾಯಿದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ, ಕಾರ್ಮಿಕ ನಿರೀಕ್ಷಕ ರವಿದಾಸ್, ಕಾಲೇಜು ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಮುಝಮ್ಮಿಲ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ಶಾಲಾ ಉಪನ್ಯಾಸಕಿ ನುಜಾಹತ್ ಫಾತಿಮಾ ಮತ್ತಿತರರು ಉಪಸ್ಥಿತರಿದ್ದರು.