ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ.
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪಿ. (೫೨) ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ಬಳಿಯಿರುವ ತಮ್ಮ ನಿವಾಸದಲ್ಲಿ ಮೇ ೨೬ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಡೆತ್‌ನೋಟ್‌ನಲ್ಲಿ ಚಂದ್ರಶೇಖರ್ ಅವರು ವಿವರವಾಗಿ ಉಲ್ಲೇಖಿಸಿದ್ದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ನನ್ನ ಸಾವಿಗೆ ಕಾರಣ. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ ೧೮೭.೩೩ ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ.
ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್‌ನವರು ಚೆಕ್ ಬುಕ್ ಮತ್ತು ಪಾಸ್ ಬುಕ್ ಅನ್ನು ಈವರೆಗೂ ನೀಡಿಲ್ಲ. ಇದಲ್ಲದೇ ನಿಗಮದಲ್ಲಿ ಅಂದಾಜು ೮೦ ಕೋಟಿಯಿಂದ ೮೫ ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ’ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.