ಮಂಗಳೂರು (ದಕ್ಷಿಣ ಕನ್ನಡ): ಎಂಎಲ್ಎ, ಎಂಎಲ್ ಸಿ ಆಗಬೇಕು ಎನ್ನುವ ಆಕಾಂಕ್ಷೆ ಪಕ್ಷದಲ್ಲಿ ದುಡಿದ ಎಲ್ಲರಿಗೂ ಇರುತ್ತದೆ. ಅದಕ್ಕೆ ನಮ್ಮ ಹಣೆಯಲ್ಲೂ ಬರೆದಿರಬೇಕು. ಆದರೆ ನಮಗೆ ಆ ಸ್ಥಾನವನ್ನು ತಪ್ಪಿಸಲು ಈ ಹುದ್ದೆಯನ್ನು ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಹೇಳಿದ್ದಾರೆ.
ಅವರು ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ ಎಂದರು. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರಗೊಂಡಿದ್ದ ವೇಳೆ ತಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.