ಬೆಂಗಳೂರು: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿವುದು) ಅಡಿಯಲ್ಲಿ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ಅವರು ಬಹಿರಂಗವಾಗಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಲು ಘೋರ ಮತ್ತು ಕ್ರಿಮಿನಲ್ ಪ್ರೇರಿತ ಅಭಿಯಾನದ ಮಾಸ್ಟರ್ ಮೈಂಡ್ ಆಗಿದ್ದಾರೆ. ದುರುದ್ದೇಶದಿಂದ ಅವರು ಸುಳ್ಳು ಹೇಳಿಕೆಯನ್ನು ಪ್ರಚಾರ ಮಾಡಿದ್ದಾರೆ” ಎಂದು ಸ್ವರೂಪ್ ಆರೋಪಿಸಿದ್ದಾರೆ.
ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೆಮದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ನಡೆ ಭಾರತದ ಪ್ರಜಾಪ್ರಭುತ್ವದ ಅಡಿಪಾಯ, ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ಮಾಡಿದ ದುರುದ್ದೇಶಪೂರ್ವಕ ದಾಳಿಯಾಗಿದೆ ಎಂದು ಅವರು ದೂರಿದ್ದಾರೆ.
ಈ ದೂರನ್ನು ತುರ್ತು ಪರಿಸ್ಥಿತಿಯಾಗಿ ಪರಿಗಣಿಸುವಂತೆ ಸ್ವರೂಪ್ ಅವರು ಭಾರತೀಯ ಪತ್ರಿಕಾ ಮಂಡಳಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಸಿಬಿಐ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.