ಮಂಡ್ಯ: ಕೇಂದ್ರ ಸರ್ಕಾರದ ಸ್ವದೇಶ ದರ್ಶನ 2.0 ಯೋಜನೆಯಡಿ 100 ಕೋಟಿ ರೂ ವೆಚ್ಚದಲ್ಲಿ ಶ್ರೀರಂಗಪಟ್ಟಣ ಸ್ಮಾರಕಗಳ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಇರುವ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಇದರಿಂದ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ ಎಂದರು.
ಕೆರೆಗಳಿಗೆ ನೀರು ತುಂಬಿಸಿ ಕೆ.ಆರ್.ಎಸ್ ಜಲಾಶಯ ಜೂನ್ ಮಾಹೆಯಲ್ಲೇ ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮವಹಿಸಿ. ಮುಖ್ಯವಾಗಿ ಕೊನೆಯ ಭಾಗದಲ್ಲಿರುವ ಕೆರೆಗಳನ್ನು ತುಂಬಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಜಿಲ್ಲೆಯಲ್ಲಿ ಅಗತ್ಯ ಅಂಬೂಲೆನ್ಸ್ ವ್ಯವಸ್ಥೆ ಇರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬೇಕು. ಹೃದಾಯಾಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿದ್ದು, ಮಂಡ್ಯ ಜಿಲ್ಲೆಯಲ್ಲೂ ಹೃದಯಾಘಾತ ಕುರಿತು ಅಧ್ಯಯನ ನಡೆಸಿ ಎಂದರು.
ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅವರು ರೈತರಿಗೆ ಬೇಕಿರುವ ಸಲಹೆಗಳನ್ನು ಕಾಲಕಾಲಕ್ಕೆ ನೀಡಿ. ಆಶ್ರಯ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ವಸತಿ ಒದಗಿಸಿ ಎಂದರು.
ಮಾಜಿ ಶಾಸಕರಾದ ಅನ್ನದಾನಿ ಅವರು ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವೃದ್ಧಾಶ್ರಮಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಅನುದಾನವನ್ನು ಹೆಚ್ಚುವರಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟಲು ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮ, ಪೋಕ್ಸೋ ಕಾಯ್ದೆ ಹಾಗೂ ಕಾನೂನಿನ ಕಠಿಣ ಕ್ರಮ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಮೈಸೂರು ಮತ್ತು ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ ವೇಗ ನಿಯಂತ್ರಿಸಲು ಎ.ಐ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು, ಹೆಚ್ಚು ವೇಗವಾಗಿ ಸಂಚರಿಸುವವರಿಗೆ ದಂಡವನ್ನು ವಿಧಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಮುಖ್ಯವಾಗಿ ಜಾತ್ರೆ ಹಾಗೂ ಸಮೂಹಿಕ ವಿವಾಹ ನಡೆಯುವ ಸ್ಥಳಗಳಲ್ಲಿ ವಿವಾಹ ನಡೆಯುವ ವರ ಹಾಗೂ ವಧುಗಳ ವಯೋಮಿತಿ ಕುರಿತು ದಾಖಲೆ ಪಡೆದುಕೊಳ್ಳುವಂತೆ ಹಾಗೂ ವಿಶೇಷ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಎಂ.ಹೆಚ್ ರಾಮಯ್ಯ ಗ್ರೂಪ್ ಆಫ್ ಇನ್ಸ್ ಟೂಷನ್ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ 6 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಶ್ರವಣ ದೋಷವುಳ್ಳ 6 ಮಕ್ಕಳಿಗೆ ಶ್ರವಣ ಸಾಧನವನ್ನು
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿತರಿಸಿದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು, ವಿಧಾನಪರಿಷತ್ ಶಾಸಕ ವಿವೇಕನಂದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.