ಚಾಮರಾಜನಗರ : ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳಿಗೆ ವಿಷವಿಟ್ಟು ಕೊಂದ ನಂತರ ರಾಜ್ಯ ಅರಣ್ಯ ಇಲಾಖೆ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚೆತ್ತುಕೊಂಡಂತಿದೆ. ದಿನ ಕಳೆದಂತೆ ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಭಾಗದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲು ಬೇಕಾದ ಮಾಹಿತಿಗಳನ್ನು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಲು ಮತ್ತು ಈ ಕುರಿತು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಖಂಡ್ರೆ ಸೂಚಿಸಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಿದ ಅವರು, ಇಲಾಖೆಯ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಈ ಭಾಗದ ಅರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲು ನೆರವಾಗುವ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಸೂಕ್ತ ಮಾಹಿತಿಗಳೊಟ್ಟಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಕಾಡುಗಳಲ್ಲಿ ವನ್ಯಜೀವಿಗಳ ಬೇಟೆ, ಮರಗಳ ಕಳ್ಳ ಸಾಕಾಣಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ತಂತ್ರಜ್ಞಾನದ ಮೊರೆಹೋಗುವಂತೆ ಸೂಚಿಸಿರುವ ಸಚಿವರು, ಸಿಸಿ ಕ್ಯಾಮೆರಾಗಳ ಅಳವಡಿಕೆ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಉಪಯೋಗ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.