ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯಿಂದ ಕನಿಷ್ಠ 5 ಸಾವಿರ ಮಂದಿ ಪಾಲ್ಗೊಳ್ಳಬೇಕೆಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧ ಧ್ವನಿ ಎತ್ತಿದ್ದು, ಉದಯಪುರ ಕ್ಷೇತ್ರದಲ್ಲಿ ನಡೆದ ಮತದಾನದ ಸಂಶೋಧನೆಯ ಫಲಿತಾಂಶವೇ ನಮ್ಮ ಹೋರಾಟಕ್ಕೆ ಆಧಾರವಾಗಿದೆ. ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಪ್ರತಿಕ್ರಿಯೆಯ ರೂಪವಾಗಿ ಈ ರಾಷ್ಟ್ರಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.
ಆರ್ಸಿಬಿ ಕಾಲ್ತುಳಿತದ ಹಿನ್ನೆಲೆ ಹೈಕೋರ್ಟ್ ರ್ಯಾಲಿಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿಯೇ ಸಮಾವೇಶ ಆಯೋಜಿಸಲಾಗಿದೆ. ಅನಂತ್ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಸಂಚಾರದ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ರಾಷ್ಟ್ರದಾದ್ಯಾಂತ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ರಾಹುಲ್ ಗಾಂಧಿ ಅವರು ಬಿಜೆಪಿ ಪಕ್ಷದ ಮತಚಳಕದ ಕುರಿತು, ಮಹಾರಾಷ್ಟ್ರ ಮತ್ತು ಕರ್ನಾಟಕದ ಘಟನೆಗಳ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಮತಪೆಟ್ಟಿಗೆಯಲ್ಲಿ ಮತಗಳ ಸೇರ್ಪಡೆ ಮತ್ತು ತೆರವು ಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಹೊರಹಾಕಲು ಈ ಹೋರಾಟ ಎಂದು ಚಲುವರಾಯಸ್ವಾಮಿ ಹೇಳಿದರು.