ಬೆಂಗಳೂರು: ಬೆಂಗಳೂರು ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಎಲ್ಲಾ ವರ್ಗಗಳ ಕೊಡುಗೆಗೆ ಗೌರವ ಸಲ್ಲಿಸಿದರು. ದೇಶದ ರಕ್ಷಣೆಯಲ್ಲಿ ಸೈನಿಕರ, ರಾಷ್ಟ್ರದ ಆರ್ಥಿಕ ಪ್ರಗತಿಯಲ್ಲಿ ರೈತ, ಕಾರ್ಮಿಕ, ಶಿಕ್ಷಕ, ವಿಜ್ಞಾನಿ, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಉತ್ಪಾದಕ ವರ್ಗಗಳ ಪಾತ್ರ ಶ್ಲಾಘನೀಯವೆಂದು ಅವರು ಪ್ರಶಂಸಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರವನ್ನು ಸ್ಮರಿಸಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ್ ಮುಂತಾದ ವೀರರನ್ನು ಸ್ಮರಿಸಿದರು. ಇಂದಿನ ಭಾರತವು ಅವರ ತ್ಯಾಗ, ಧೈರ್ಯದ ಫಲವೆಂದು ಹೇಳಿದರು. ಭಯೋತ್ಪಾದಕರ ದಾಳಿಗಳಲ್ಲಿ ಹುತಾತ್ಮರಾದ ಸೈನಿಕರು ಮತ್ತು ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿದರು.
ಅವರು ದೇಶದ ಆರ್ಥಿಕತೆಯ ಅಸಮಾನತೆ ಕುರಿತಂತೆ ಮಾತನಾಡಿ ಶೇ.10 ಶ್ರೀಮಂತರ ಬಳಿ ಶೇ.80ರಷ್ಟು ಸಂಪತ್ತು ಇರುವುದು ಆತಂಕಕಾರಿ ಎಂದು ಸೂಚಿಸಿದರು. ಈ ಅಸಮಾನತೆಯನ್ನು ನಿವಾರಿಸಲು ‘ಗ್ಯಾರಂಟಿ ಯೋಜನೆ’ಗಳ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳಿಗೆ ಈಗಾಗಲೇ 96,000 ಕೋಟಿ ರೂಪಾಯಿ ಖರ್ಚಾಗಿದೆ ಎಂದು ವಿವರಿಸಿದರು.
ರಾಜ್ಯದ ತಲಾ ಆದಾಯ ಶೇ.101ರಷ್ಟು ಏರಿಕೆ ಕಂಡಿರುವುದು ಹೆಮ್ಮೆದಾಯಕ ಎನ್ನುತ್ತಾ, ಶ್ರೇಷ್ಠ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ, ಮಹಿಳಾ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ರೂಪಿಸಲಾಗಿದೆ ಎಂದು ಹೇಳಿದರು. ಕರ್ನಾಟಕ ಅಭಿವೃದ್ಧಿ ಮಾದರಿ ಇಡೀ ದೇಶದ ಗಮನ ಸೆಳೆದಿದೆ ಎಂದರು.
ಬೆಂಗಳೂರಿನ ಶಾಶ್ವತ ಸಮಸ್ಯೆಗಳಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿರುವುದಾಗಿ ಅವರು ವಿವರಿಸಿದರು – ಡಬಲ್ ಡೆಕರ್ ರಸ್ತೆಗಳು, ಮೆಟ್ರೋ ಮಾರ್ಗ ವಿಸ್ತರಣೆ, ನೀರಿನ ಸಮಸ್ಯೆಗೆ ಬಗೆಹರಿಕೆ, ಆಟದ ಮೈದಾನಗಳ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳು ಪ್ರಗತಿಯಲ್ಲಿವೆ.
ಸಮ್ಮಿಶ್ರ ಸಮಾಜ ನಿರ್ಮಾಣಕ್ಕಾಗಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವದ ತತ್ತ್ವಗಳನ್ನು ಅನ್ವಯಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಸಮಗ್ರ ಅಭಿವೃದ್ಧಿಗೆ ಸಮಾಜದ ಎಲ್ಲ ವರ್ಗಗಳ ಪ್ರತಿನಿಧಿ ಭಾವನೆ ಮುಖ್ಯ ಎಂದರು.
ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನು, ಇಂಟರ್ನೆಟ್ಟು ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ.
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಿದ್ದೇವೆ. ಹಾಗೆಯೇ ನಾವೆಲ್ಲರೂ ನಮ್ಮ ಹೆಮ್ಮೆಯ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ. ಈ ಹೋರಾಟದಲ್ಲಿ ಪ್ರತಿ ಪ್ರಜೆಯೂ ಯೋಧರಂತೆ ಕೆಲಸ ಮಾಡಬೇಕಾಗಿದೆ. ಸರ್ಕಾರವು ಈಗಾಗಲೇ ಈ ವಿಚಾರದಲ್ಲಿ ಸಕಲ ಆಯಾಮಗಳಲ್ಲಿ ಕೆಲಸ ಮಾಡುತ್ತಿದೆ.
ಒಕ್ಕೂಟ ಸರ್ಕಾರವು ತೆರಿಗೆ ಮುಂತಾದ ಸಂಪನ್ಮೂಲಗಳನ್ನು ಹಂಚುವಾಗ ನಿಷ್ಪಕ್ಷಪಾತದ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ, ಸಿಬಿಐ ಮತ್ತು ಕೆಲವು ಸಾಂವಿಧಾನಿಕ ಸಂಸ್ಥೆಗಳು ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ನೈಜ ಮೌಲ್ಯಗಳ ಉಳಿವಿಗಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆಕ್ರೋಶವು ವಿವಿಧ ವೇದಿಕೆಗಳಿಂದ ವ್ಯಕ್ತವಾಗುತ್ತಿದೆ. ಈ ಕುರಿತು ಜವಾಬ್ದಾರಿಯುಳ್ಳ ನಾಗರಿಕರೆಲ್ಲ ಧ್ವನಿಯೆತ್ತಬೇಕಾಗಿದೆ.
ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಾಮರಸ್ಯದಿಂದ ಕೂಡಿದ ಸಮೃದ್ಧ ಕರ್ನಾಟಕವನ್ನು ನಿರ್ಮಾಣ ಮಾಡುವುದರ ಮೂಲಕ ಸಶಕ್ತ ಭಾರತವನ್ನು ಕಟ್ಟೋಣ. ಸ್ವಾತಂತ್ರ್ಯ, ಸಂವಿಧಾನ ಹಾಗೂ ನೈಜ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಕ್ಕಿಂತ ಮಿಗಿಲು ಎಂದು ಭಾವಿಸೋಣ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳನ್ನು ನಿರಂತರವಾಗಿ ರಕ್ಷಿಸಿಕೊಳ್ಳುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣಗೊಳಿಸೋಣ ಎಂದರು.
ಅಂತಿಮವಾಗಿ, “ಅಭಿವೃದ್ಧಿಯ ಉತ್ತುಂಗ ತಲುಪಿದಾಗ ಸಮಾಜಕ್ಕೆ ಮರಳಿ ಕೊಡುಗೆ ನೀಡುವುದು ನಿಜವಾದ ಸ್ವಾತಂತ್ರ್ಯ” ಎಂದು ಮುಖ್ಯಮಂತ್ರಿ ತಮ್ಮ ಭಾಷಣವನ್ನು ಸಮಾರೋಪಗೊಳಿಸಿದರು. ಇದು ನವ ಭಾರತ ನಿರ್ಮಾಣದ ನವ ಚೇತನವನ್ನು ಪ್ರತಿಬಿಂಬಿಸುವ ಧ್ವನಿ ಎಂದೆನಿಸುತ್ತದೆ ಎಂದರು.