ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಗಸ್ಟ್ 28ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆ.28 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ಆ.25ಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ಬೀದರ್‌ನಲ್ಲಿ ಆ.28ರಿಂದ ಮುಂದಿನ 2 ದಿನ ಹಾಗೂ ಕೊಡಗು, ಬೆಳಗಾವಿಯಲ್ಲಿ ಆ.29ರಂದು ಬಿರುಸಾಗಿ ಸುರಿಯುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿಯಲ್ಲಿ ಆ.28ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.