ಬೆಂಗಳೂರು : ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿನಾಯಕನ ಪ್ರತಿಷ್ಠಾಪನೆಗೆ ಎಲ್ಲೆಡೆ ಜನರು ಸಜ್ಜಾಗುತ್ತಿದ್ದು, ಸರ್ಕಾರ ಬಿಗಿ ನಿಯಮಗಳನ್ನು ಜಾರಿಗೆ ತರುತ್ತಿದೆ.
ಗಣಪತಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜನರಿಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಗಳ ಆಯಾ ಜಿಲ್ಲಾಧಿಕಾರಿಗಳ ಮೂಲಕ ಕಟ್ಟುನಿಟ್ಟಿನ ಆದೇಶ ಪರಿಪಾಲನೆಗೆ ನಿಯಮಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದ್ದು, ಗಣಪತಿ ಹಬ್ಬವನ್ನು ಪರಿಸರ ಸ್ನೇಹಿಯಾಗಿಸುವ ಕಡೆ ಹೆಚ್ಚು ಗಮನವಹಿಸಿದೆ.
ಏನೆಲ್ಲಾ ನಿಯಮಗಳು : ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಮಾರಾಟ ಮಾಡುವ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಇನ್ನು, ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ- ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಹಾಗೆಯೇ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು ಕಡ್ಡಾಯವಾಗಿದೆ.
ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸಗಳಾದ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವ ಕುರಿತು ಸೂಚನೆ ನೀಡಲಾಗಿದೆ. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಲು ಅನುಮತಿ ನೀಡಲಾಗಿದೆ.
ಧ್ವನಿವರ್ಧಕ ನಿಷೇಧ: ಇನ್ನು ಇತ್ತೀಚೆಗೆ ಮ್ಯೂಸಿಕ್ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ. ಹೀಗಾಗಿ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವು ಕುರಿತು ಜನರಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ.