ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಿಸಿ, ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ರೌಡಿಶೀಟರ್‌ಗಳ ಸಹಿತ ಆರು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಅಲಿಯಾಸ್ ಅಪ್ಪಿ, ಸೀನಾ ಅಲಿಯಾಸ್ ಬಾಂಬೆ ಸೀನಾ, ಲೋಕೇಶ್ ಕುಮಾರ್, ನವೀನ್ ಕುಮಾರ್, ಸೋಮಯ್ಯ ಮತ್ತು ಯುಕೇಶ್ ಬಂಧಿತ ಆರೋಪಿಗಳು.
ಬಂಧಿತರು ಆಗಸ್ಟ್ 26ರಂದು ರಾಜಾಜಿನಗರದ ಮೋದಿ ಆಸ್ಪತ್ರೆ ಸರ್ಕಲ್‌ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಹೆಚ್.ವಿ.ಮನೋಜ್ ಕುಮಾರ್ (25) ಅವರನ್ನು ಅಪಹರಿಸಿ ಸುಲಿಗೆ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.