ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘೋರ ದುರಂತ ಒಂದು ಸಂಭವಿಸಿದ್ದು, ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಬಳಿ ಗಣೇಶ ವಿಸರ್ಜನಾ ಮೆರವಣಿಗೆಗೆ ವೇಳೆ ಟ್ರಕ್ ಹರಿದು ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದು, 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಘೋಷಣೆ ಮಾಡಿದ್ದಾರೆ.