ಮೈಸೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಆಕ್ಷೇಪಿಸಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಸಲ್ಲಿಕೆಯಾದ ಎರಡು ದಿನಗಳ ಬಳಿಕ ಬೆಂಗಳೂರಿನ ಹೆಚ್.ಎಸ್.ಗೌರವ್, ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯ ಅವರು ಪ್ರತ್ಯೇಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಬಾನು ಮುಷ್ತಾಕ್ ಹಿಂದೂ ವಿರೋಧಿ ಮಾತುಗಳನ್ನಾಡಿದ್ದಾರೆ. ಭುವನೇಶ್ವರಿ, ಕುಂಕುಮ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ಅವರ ಧರ್ಮದಲ್ಲಿ ಮೂರ್ತಿ ಪೂಜೆ ಇಲ್ಲ. ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರಿಗೆ ಸರ್ಕಾರ ನೀಡಿದ್ದ ಆಹ್ವಾನವನ್ನು ಹಿಂಪಡೆಯಬೇಕು ಎಂದು ವಾದಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಷಯದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡು ಬರುವುದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ.