ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ ವಿಧಾನಸೌಧದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಸಿದ್ದಣ್ಣ ತೇಜಿ ನೀಡಿದ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ ಬಿಎನ್‌ಎಸ್- 353(2) ಅಡಿಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುರುಬರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವ ವಿಷಯಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನಲ್ಲಿ ಶ್ರೀವತ್ಸ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಟೀಕಿಸುವ ಭರದಲ್ಲಿ ಇಡೀ ಕುರುಬ ಸಮಾಜಕ್ಕೆ ಅವಮಾನ ಹಾಗೂ ದೌರ್ಜನ್ಯ ಎಸಗಿದ್ದಾರೆ. ಎಸ್ ಟಿ ಸಮುದಾಯ ಮತ್ತು ವಾಲ್ಮೀಕಿ ಸಮಾಜ ಕುರುಬ ಸಮಾಜದ ಮೇಲೆ ದಂಗೆ ಏಳಬೇಕು ಎನ್ನುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಇಬ್ಬರೂ ಮುಖಂಡರು ಸಮುದಾಯದ ಜನರನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳುಗೆಡವಲು ಪ್ರಯತ್ನಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದಣ್ಣ ತೇಜಿ ದೂರಿನಲ್ಲಿ ಹೇಳಿದ್ದಾರೆ.