Thursday, November 27, 2025
Google search engine

Homeರಾಜಕೀಯಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ: ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ: ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯೇ ಬರಬಾರದಿತ್ತು. ಆದರೂ ಯಾರೋ ಕೆಲವರು ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಹೈಕಮಾಂಡ್ ಎಲ್ಲೂ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ನನಗೆ ಇರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ. ನಮ್ಮ ತಂದೆಯವರಾಗಲಿ, ಕೆಲ ಹಿರಿಯ ಸಚಿವರಾಗಲಿ ಈ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಅಲ್ಲಿಗೆ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲ ಎಂದು ಅರ್ಥ ತಾನೇ? ಯಾರಿಗೆ ಎಷ್ಟು ಶಾಸಕರ ಬೆಂಬಲ ಇದೆ ಎನ್ನುವಂತಹ ಚರ್ಚೆ ಮಾಡುವುದು ಬೇಡ. ಅದು ನಮ್ಮ ಪಕ್ಷದ ಆಂತರಿಕ ವಿಚಾರ. ಮತ್ತೆ ಮತ್ತೆ ಆ ಅಂಕಿ ಸಂಖ್ಯೆ ಕೇಳಬೇಡಿ. ಎಲ್ಲಾ ಶಾಸಕರ ಬೆಂಬಲ ನನ್ನ ತಂದೆಗೆ ಇದೆ ಎಂದು ಸ್ಪಷ್ಟಪಡಿಸಿದರು.

ಯಾರನ್ನು ಮುಖ್ಯಮಂತ್ರಿ ಮಾಡಬೇಕು, ಯಾರನ್ನು ಮಾಡಬಾರದು ಎನ್ನುವುದು ನಮ್ಮ ಶಾಸಕರಿಗೆ ಮತ್ತು ನಮ್ಮ ಹೈಕಮಾಂಡ್ ಗೆ ಬಿಟ್ಟ ವಿಚಾರ. ಅದರ ಬಗ್ಗೆ ಬೇರೆಯವರ ಅಭಿಪ್ರಾಯ ಅನಗತ್ಯ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಪರ ಮಾತನಾಡಿದ್ದ ಆದಿಚುಂಚನಗಿರಿ ಮಠದ ಸ್ವಾಮೀಜಿಯವರ ಹೇಳಿಕೆಗೆ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.

RELATED ARTICLES
- Advertisment -
Google search engine

Most Popular