Thursday, December 25, 2025
Google search engine

Homeರಾಜಕೀಯನೈಸ್ ಪ್ರಕರಣ: ರಿಟ್ ಅರ್ಜಿಯಲ್ಲಿ ನನ್ನ ಹೆಸರು ಉಲ್ಲೇಖ ಹೆಚ್.ಡಿ.ದೇವೇಗೌಡ ಬೇಸರ!

ನೈಸ್ ಪ್ರಕರಣ: ರಿಟ್ ಅರ್ಜಿಯಲ್ಲಿ ನನ್ನ ಹೆಸರು ಉಲ್ಲೇಖ ಹೆಚ್.ಡಿ.ದೇವೇಗೌಡ ಬೇಸರ!

ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನ ಹೆಸರನ್ನು ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಈ ಬಗ್ಗೆ ಬುಧವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೆಲವು ರೈತರು ಹಾಗೂ ನನ್ನನ್ನು ಉಲ್ಲೇಖ ಮಾಡಿದೆ. ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ತಿಳಿಸಿದರು.

ಇನ್ನೂ ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‍ಶಿಪ್ ಗಳು, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್ ಕಂಪೆನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರಕಾರದ ಅಡ್ವೋಕೇಟ್ ಜನರಲ್, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್ ಕಂಪೆನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ನನಗೆ ಇನ್ನೂ ಹೋರಾಟದ ಕೆಚ್ಚಿದೆ. ಹೋರಾಟ ಮಾಡುವ ಶಕ್ತಿ ಇದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ದೇವೇಗೌಡರು ದೂರಿದರು.

ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ ಸಿಂಗ್‌ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್‌ ಸಿಂಗ್‌, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್‌, ನಬಾರ್ಡ್‌ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ. ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ ಎಂದಿದ್ದಾರೆ.

ಇನ್ನೂ ಜನವರಿ 30ರಂದು ಸಂಸತ್‌ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಫಲ್ಯಗಳು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular