Thursday, December 25, 2025
Google search engine

Homeರಾಜ್ಯಚಿತ್ರದುರ್ಗ ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ: ಸಂತ್ರಸ್ತರಿಗೆ ಮೋದಿ 2 ಲಕ್ಷ ರೂ....

ಚಿತ್ರದುರ್ಗ ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ: ಸಂತ್ರಸ್ತರಿಗೆ ಮೋದಿ 2 ಲಕ್ಷ ರೂ. ಪರಿಹಾರ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಈ ದಾರುಣ ಘಟನೆಯ ಸಂತ್ರಸ್ತರಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಈ ಕುರಿತು ಸಂತಾಪ ಸೂಚಿಸಿದ್ದು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದಿದ್ದಾರೆ.

ಈ ಕುರಿತು ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆʼ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular