ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಈ ಕುರಿತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಮತದಾರರ ಬಗ್ಗೆ ಕಾಳಜಿ ಹೊಂದಿದ್ದು, ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು.
ಇನ್ನೂ ಎಸ್ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್ಓ ಗಳಿಗೆ ಸೂಚಿಸಲಾಗಿದ್ದು, ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ. ಜನರು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಯಲಿ ಎಂಬ ಆಗ್ರಹ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಶಾಸಕ ಜನಾರ್ದನರೆಡ್ಡಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರೆಡ್ಡಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲು ಸೇರಿದ್ದರು. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಪ್ರಕರಣ ಬಾಕಿ ಇದೆ. ಅಲ್ಲಿ ಅವರಿಗೆ ನಮ್ಮ ವಿರುದ್ಧ ಆರೋಪ ಮಾಡುವ ನೈತಿಕ ಹಕ್ಕಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಲ್ಲಿಸಿರುವ ಮೊಕದ್ದಮೆ ಜನವರಿ 21 ರಂದು ವಿಚಾರಣೆಗೆ ಬರಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿಲುವು ನೀಡಲು ರಾಜ್ಯದ ಕಾನೂನು ತಂಡ ಸಿದ್ಧವಾಗಿದೆ.ರಾಜ್ಯಗಳ ಗಡಿ ನಿರ್ಧರಿಸುವ ವಿಷಯ ಸುಪ್ರೀಂ ಕೋರ್ಟ್‌ನ ವ್ಯಾಪ್ತಿಗೆ ಬರುತ್ತದೆಯೇ ಎಂದು ನಾವು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು.



