ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಮಾಜಿ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಜಾರಿ ನಿರ್ದೇಶನಾಲಯದ ಬಂಧನದಿಂದ ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.
ಈ ವೇಳೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿರುವ ನ್ಯಾಯಪೀಠ, ಅರ್ಜಿದಾರರು ಸುದೀರ್ಘವಾಗಿ ಜೈಲು ವಾಸದಲ್ಲಿ ಇರುವುದಕ್ಕೆ ಅವಕಾಶ ನೀಡದಂತೆ ಶೀಘ್ರದಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು ಎಂದರಲ್ಲದೆ ಮುಂದಿನ ಮೂರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದಲ್ಲಿ ಅರ್ಜಿದಾರರು ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ಕಾಯ್ದಿರಿಸಿದೆ.
ಮುಡಾ ಮಾಜಿ ಆಯುಕ್ತರು ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ. ನ್ಯಾಯಾಲಯ ವಿಧಿಸುವ ಷರತ್ತುಗಳನ್ನು ಪಾಲಿಸಲು ಸಿದ್ಧರಿದ್ದಾರೆ. ಹಾಗಾಗಿ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.
ಇದಕ್ಕೆ ಇ.ಡಿ ಪರ ವಕೀಲರು, ಪ್ರಕರಣದಲ್ಲಿಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಈಗಾಗಲೇ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಅದರಲ್ಲಿ ಎಲ್ಲಾ ವಿವರಗಳನ್ನು ಉಲ್ಲೇಖಿಸಲಾಗಿದೆ. ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಬಿಡುಗಡೆ ಮಾಡಬಾರದು ಎಂದು ಮನವಿ ಮಾಡಿದ್ದರು.



