Friday, February 6, 2026
Google search engine

Homeಸಿನಿಮಾನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ನಾದಬ್ರಹ್ಮ ಹಂಸಲೇಖ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಚಿತ್ರೋತ್ಸವಕ್ಕೆ ಶುಕ್ರವಾರ (ಫೆಬ್ರವರಿ 6) ಸಮಾರೋಪ ಸಮಾರಂಭ ನೆರವೇರಲಿದ್ದು, ನಾದಬ್ರಹ್ಮ ಡಾ.ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ವಿನೋದ್‌ ಚಂದ್ರ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ಮುರಳಿ ಅವರು ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಭೇಟಿ ಮಾಡಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಕಳೆದ ಒಂದು ವಾರದಿಂದ ಸಿನಿಮಾಸಕ್ತರ ಮನಸ್ಸು ಗೆದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ ಶುಕ್ರವಾರ (ಫೆ.6) ಸಂಜೆ ಲುಲು ಮಾಲ್‌ನಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎನ್ನಲಾಗಿದೆ.

ಕನ್ನಡ ಚಿತ್ರರಂಗಕ್ಕೆ ಹಂಸಲೇಖ ಕೊಡುಗೆ :

ಸ್ಯಾಂಡಲ್‌ವುಡ್‌ನ ‘ನಾದಬ್ರಹ್ಮ’ ಎಂದೇ ಖ್ಯಾತರಾಗಿರುವ ಹಂಸಲೇಖ ಅವರು 80 ಮತ್ತು 90ರ ದಶಕದಲ್ಲಿ ಕನ್ನಡ ಚಿತ್ರಸಂಗೀತದ ದಿಕ್ಕನ್ನೇ ಬದಲಿಸಿದ ಮೇರು ಪ್ರತಿಭೆ. 1987ರಲ್ಲಿ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಸಂಗೀತ ನಿರ್ದೇಶಕರಾಗಿ ಹೊರಹೊಮ್ಮಿದ ಅವರು, ಪಾಶ್ಚಾತ್ಯ ಸಂಗೀತದ ಶೈಲಿಗೆ ಕನ್ನಡದ ದೇಸಿ ಸೊಗಡನ್ನು ಬೆರೆಸಿ ಹೊಸ ಅಲೆಯನ್ನೇ ಎಬ್ಬಿಸಿದವರು.

ಅಲ್ಲದೆ ಸ್ವತಃ ಸಾಹಿತ್ಯ ಬರೆದು ಅದಕ್ಕೆ ರಾಗ ಸಂಯೋಜಿಸುವ ಅವರ ವಿಶಿಷ್ಟ ಶೈಲಿಯಿಂದಾಗಿ ರಣಧೀರ, ಅಂಜದ ಗಂಡು, ರಾಮಾಚಾರಿ, ಓಂ, ಮುತ್ತಿನ ಹಾರ ದಂತಹ ನೂರಾರು ಚಿತ್ರಗಳ ಹಾಡುಗಳು ಇಂದಿಗೂ ಜನಪ್ರಿಯವಾಗಿದ್ದು, ರವಿಚಂದ್ರನ್ ಮತ್ತು ಹಂಸಲೇಖ ಅವರ ಜೋಡಿ ಕನ್ನಡದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದಾಗಿದೆ.

ಇನ್ನೂ ಕೇವಲ ಕಮರ್ಷಿಯಲ್ ಸಿನಿಮಾಗಳಲ್ಲದೆ, ಶಾಸ್ತ್ರೀಯ ಸಂಗೀತ ಆಧಾರಿತ ಗಾನಯೋಗಿ ಪಂಚಾಕ್ಷರಿ ಗವಾಯಿ ಚಿತ್ರಕ್ಕೆ ಸಂಗೀತ ನೀಡುವ ಮೂಲಕ ಅತ್ಯುತ್ತಮ ಸಂಗೀತ ನಿರ್ದೇಶಕ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡ ಹೆಗ್ಗಳಿಕೆ ಇವರದ್ದು. ಹಂಸಲೇಖ ಅವರು ಕೇವಲ ಸಿನಿಮಾಕ್ಕೆ ಸೀಮಿತವಾಗದೆ, ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಹಂಸಲೇಖ ದೇಶಿ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸಿ, ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಉಚಿತವಾಗಿ ಸಂಗೀತ ತರಬೇತಿ ನೀಡುತ್ತಿದ್ದು, ಆರು ಬಾರಿ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಗೆ ಭಾಜನರಾಗಿರುವ ಹಂಸಲೇಖ, ಕನ್ನಡ ಸಂಸ್ಕೃತಿ ಮತ್ತು ಜಾನಪದವನ್ನು ತಮ್ಮ ಹಾಡುಗಳ ಮೂಲಕ ಶ್ರೀಮಂತಗೊಳಿಸಿದ ಅಪ್ರತಿಮ ಸಾಧಕ ಹಂಸಲೇಖ.

ಈ ವೇಳೆ ಚಿತ್ರೋತ್ಸವದಲ್ಲಿ ಏಷ್ಯನ್‌ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾ ಎಂಬ ಮೂರು ಸ್ಪರ್ಧಾ ವಿಭಾಗಗಳಿದ್ದು, ಈ ವಿಭಾಗಗಳಲ್ಲಿ ಸ್ಪರ್ಧಿಸಿ, ಪ್ರಶಸ್ತಿ ಗೆದ್ದವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಕಾರ್ಯಕಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗೂಂಡೂರಾವ್‌ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಡಾ.ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ಮುಂತಾದವರು ಭಾಗವಹಿಸಲಿದ್ದಾರೆ.

RELATED ARTICLES
- Advertisment -
Google search engine

Most Popular