Thursday, February 19, 2026
Google search engine

Homeಅಪರಾಧ26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ರೌಡಿಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹುಸೈನ್ (42) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 2 ಕೊಲೆ, 4 ಕೊಲೆಯತ್ನ, ಗ್ಯಾಂಗ್‌ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ಸಂಚು ಇತ್ಯಾದಿ ಪ್ರಕರಣಗಳಿಗೆ ಸಂಬಂಧಿಸಿದಂತೆ 26 ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಈತನ ವಿರುದ್ಧ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ 2020ರಲ್ಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ 3 ವರ್ಷ ವಿಧಿಸಲಾಗಿತ್ತು. ಈತನ ವಿರುದ್ಧ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
2017ರಲ್ಲಿ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಲೆಪ್ಪಿ ಸಫ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರ ಭಾಗಿಯಾಗಿ ತಲೆಮರೆಸಿಕೊಂಡಿದ್ದ. ಬಳಿಕ ಆಂಧ್ರಪ್ರದೇಶದಲ್ಲಿ ತನ್ನ ಹೆಸರನ್ನು ಉಮ್ಮರ್ ಮುಹಮ್ಮದ್ ನಾಸಿರ್ ಎಂದು ಬದಲಾಯಿಸಿ ನಕಲಿ ಹೆಸರಿನಲ್ಲಿ ಆಧಾರ್, ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಅಲ್ಲದೆ 2016ರಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ. ವಿದೇಶದಲ್ಲಿ ಮಂಗಳೂರು ಮೂಲದ ವ್ಯಾಪಾರಿಗಳಿಗೆ ಹಣಕ್ಕಾಗಿ ಬೆದರಿಸಿದ ಬಗ್ಗೆ ದೂರು ದಾಖಲಾಗಿತ್ತು.
ಆರೋಪಿ ಸಫ್ವಾನ್ ಹುಸೈನ್‌ನನ್ನು ಆಂಧ್ರಪ್ರದೇಶದ ರಾಯಚೋಟಿಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈತನಿಗೆ ತಲೆಮರೆಸಿಕೊಳ್ಳಲು ನಕಲಿ ದಾಖಲೆ, ಪಾಸ್‌ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular