ಮಂಗಳೂರು : ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು,
ಸಾರ್ವಜನಿಕರು ಕಟ್ಟಡ ನಿರ್ಮಾಣ, ನಿವೇಶನ ನಕ್ಷೆ ಮಂಜೂರಾತಿ ಸೇರಿದಂತೆ ವಿವಿಧ ಮಂಜೂರಾತಿಗಳಿಗೆ ಇ-ಖಾತಾ ಮತ್ತು ಇ-ಸ್ವತ್ತು ಅಗತ್ಯವಾಗಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ಇ-ಖಾತಾ ನೀಡಿಕೆ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಇಂತಹ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದವರೊಂದಿಗೆ ಕ್ಷಿಪ್ರವಾಗಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಸೂಚಿಸಿದರು.
ಅಲ್ಲದೆ, ಪ್ರಸ್ತುತ ಇ-ಖಾತಾ ನೀಡಿಕೆ ಸಮಸ್ಯೆ ಬಗೆಹರಿದಿದ್ದು, ಫೆಬ್ರವರಿ ತಿಂಗಳಲ್ಲಿ ೧೦೫೮ ಇ-ಖಾತಾಗಳನ್ನು ನೀಡಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ಸಭೆಗೆ ಮಾಹಿತಿ ನೀಡಿದರು.
ಇನ್ನೂ ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ರಂಗಮಂದಿರ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಬೇಕು. ಬಂಟ್ವಾಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪಂಜ ಮಂಗೇಶರರಾಯ ಭವನ ತ್ವರಿತವಾಗಿ ಪೂರ್ಣಗೊಳಿಸಬೇಕು. ನಗರದ ಅತ್ತಾವರದಲ್ಲಿ ಕುದ್ಮುಲ್ ರಂಗರಾವ್ ಸಮಾಧಿ ಸ್ಥಳ ಅಭಿವೃದ್ಧಿಗೆ ಅರಣ್ಯ ತಕರಾರನ್ನು ಶೀಘ್ರದಲ್ಲಿ ಬಗೆಹರಿಸಲು ಸೂಚಿಸಿದರಲ್ಲದೆ, ಗ್ರಾಮಾಂತರ ಪ್ರದೇಶದಲ್ಲಿ ವಿನ್ಯಾಸ, ನಕ್ಷೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಯೋಜನಾ ಪ್ರಾಧಿಕಾರಗಳು ಹೆಚ್ಚುವರಿ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ತ್ಯಾಜ್ಯ ಶುದ್ಧೀಕರಣ ಘಟಕದಲ್ಲಿ ಶುದ್ಧೀಕರಣಗೊಂಡ ನೀರನ್ನು ಬೃಹತ್ ಕೈಗಾರಿಕೆಗಳು ಬಳಸುವಂತಾಗಲು ಸಂಬಂಧಿಸಿದ ಉದ್ಯಮಗಳೊಂದಿಗೆ ಮಾತುಕತೆ ನಡೆಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಥರ್ಡ್-ಪಾರ್ಟಿ ಪರಿಶೀಲನೆ ನಡೆಸುವಂತೆ ದಿನೇಶ್ ಗುಂಡೂರಾವ್ ಸೂಚಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣಗೊಂಡು ಕಾಮಗಾರಿ ಪೂರ್ಣಗೊಂಡಿರುವ ಹಾಸ್ಟೆಲ್ ಕಟ್ಟಡಗಳ ಉದ್ಘಾಟನೆಗೆ ಕಾಯದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್.ಹೆಚ್.ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು.ಕೆ ಮತ್ತಿತರರು ಇದ್ದರು.



