ಬೆಂಗಳೂರು : ಅ. 1 ರಿಂದ ರಾಜ್ಯಾದ್ಯಂತ ಭೂಮಿಯ ಪರಿಷ್ಕೃತ ನೂತನ ಮಾರ್ಗಸೂಚಿ ದರ (ಗೈಡೆನ್ಸ್ ವ್ಯಾಲ್ಯೂ) ಜಾರಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ, ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಪರಿಷ್ಕರಣೆಯಾಗಿಲ್ಲ. ಇದರಿಂದ ಹಲವು ಕಡೆಗಳಲ್ಲಿ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ಯಾಯವಾಗಿದ್ದರೆ, ಇದು ಕಪ್ಪು ಹಣ ವಹಿವಾಟಿಗೂ ಕಾರಣವಾಗಿದೆ. ಹೀಗಾಗಿ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ ಎಂದು ತಿಳಿಸಿದರು.
ಮಾರ್ಗಸೂಚಿ ದರ ಯಾವ ಯಾವ ಪ್ರದೇಶಗಳಲ್ಲಿ ಎಷ್ಟು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕರಣೆಗೆ ಯಾವ ನಿಯಮಗಳನ್ನು ಅನ್ವಯಿಸಲಾಗಿದೆ ಎಂಬ ಮಾಹಿತಿ ನೀಡಿದ ಸಚಿವರು, ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.೧೦ ರಷ್ಟು ಏರಿಕೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ ೫೦೦ ಪಟ್ಟು ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ ೫ ರಿಂದ ೧೦ ಲಕ್ಷ ಇದ್ದರೆ, ಮಾರುಕಟ್ಟೆ ದರ ೧೦ ಕೋಟಿಗೂ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. ೫೦ರಷ್ಟು ಹೆಚ್ಚಿಸಲಾಗಿದೆ ಎಂದರು.
ಮಾರ್ಗಸೂಚಿ ದರಕ್ಕೂ ಮಾರುಕಟ್ಟೆ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರಬಾರದು ಎಂಬ ಕಾನೂನಿದೆ. ಹೀಗಾಗಿ ಈ ಅಲ್ಪ ನ್ಯೂನ್ಯತೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆ ನಿಟ್ಟಿನಲ್ಲಿ ಈ ಕ್ರಮವನ್ನು ಮಾರ್ಗಸೂಚಿ ದರ ಪರಿಷ್ಕರಣೆ ಎಂಬುದಕ್ಕಿಂತ ನ್ಯೂನ್ಯತೆಯನ್ನು ಸರಿಪಡಿಸಲಾಗಿದೆ ಎಂಬುದು ಸೂಕ್ತ ಎಂದು ಸಚಿವರು ಅಭಿಪ್ರಾಯಪಟ್ಟರು. ಮಾರ್ಗಸೂಚಿ ದರ ಪರಿಷ್ಕರಣೆಯಲ್ಲಿ ಯಾರಿಗಾದರೂ ತಕರಾರು ಇದ್ದರೆ, ಅದನ್ನೂ ಸಲ್ಲಿಸಬಹುದು. ಅಧಿಕಾರಿಗಳು ತಕರಾರುಗಳನ್ನೂ ಗಮನಿಸಿ ಹೊಸ ಮಾರ್ಗಸೂಚಿ ದರವನ್ನು ಜಾರಿಗೊಳಿಸುವರು ಎಂದು ತಿಳಿಸಿದರು.