ಮೈಸೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಬೀರೇಶ್ (37) ಎಂದು ತಿಳಿದುಬಂದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ ಬೀರೇಶ್ ಮೈಸೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೀರೇಶ್ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ನಂಜನಗೂಡಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಕೊಠಡಿಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವೀಂದ್ರ, ಪಿಎಸ್‌ಐ ಕೃಷ್ಣಕಾಂತ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.