ಮಂಗಳೂರು ಪ್ರವೇಶ ಮಾಡುತ್ತಿದ್ದಂತೆ ಸುಂದರ ಸ್ವಾಗತ ನೀಡುವ ಪಂಪ್‌ವೆಲ್ ಮಹಾವೀರ ವೃತ್ತ ಇಂದು ಹೊಸತನದೊಂದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ 9 ವರ್ಷಗಳ ನಿರೀಕ್ಷೆಗೆ ತೆರೆ ಬಿದ್ದಿದೆ. ಹೌದು. ಮಹಾವೀರ ವೃತ್ತವನ್ನು ಪುನರ್‌ನಿರ್ಮಾಣಗೊಳಿಸಿ ಸಾಂಸ್ಕೃತಿಕ ವೈಭವದೊಂದಿಗೆ ರೂಪುಗೊಳಿಸಲಾಗಿದೆ. ಬಹುನಿರೀಕ್ಷಿತ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಜನವರಿ 24ರ ರವಿವಾರ ನಡೆಯಲಿದೆ ಎಂದು ಮಂಗಳೂರು ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ್ ಜೈನ್ ತಿಳಿಸಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳೂರು ಜೈನ್ ಸೊಸೈಟಿಯ ಮುಂದಾಳತ್ವದಲ್ಲಿ ಈ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವೃತ್ತವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಎಂ. ಎನ್. ರಾಜೇಂದ್ರಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ನಾಮಫಲಕ ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡಾ ಮಾಜಿ ಅಧ್ಯಕ್ಷ ಕೆ. ಸುರೇಶ್ ಬಲ್ಲಾಳ್ ಹಾಗೂ ಸ್ಥಳೀಯ ಮಾಜಿ ಕಾರ್ಪೊರೇಟರ್ ಸಂದೀಪ್ ಗರೋಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ವರದಿ: ಶಂಶೀರ್ ಬುಡೋಳಿ



