Monday, July 13, 2026
Google search engine

Homeಅಪರಾಧಅಧಿಕಾರ ದುರುಪಯೋಗ ಆರೋಪ : KPSC ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅಮಾನತು

ಅಧಿಕಾರ ದುರುಪಯೋಗ ಆರೋಪ : KPSC ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅಮಾನತು

ಬೆಂಗಳೂರು : ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನೇಮಕವಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಮಾನತುಗೊಳಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದ್ದು, ಪ್ರಕರಣವನ್ನು ಸುಪ್ರೀಂಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ KPSCಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ.

ಶಿವಶಂಕರಪ್ಪ ಸಾಹುಕಾರ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಪುತ್ರಿಗೆ ಸರ್ಕಾರಿ ಹುದ್ದೆ ಪಡೆಯಲು ನೆರವಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಲು ಸಹಕರಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2024ರ ಮಾರ್ಚ್ 15ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗೆ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿ ಸುಮಾ ಎಸ್.ಸಾಹುಕಾರ್ ಅವರು 3ಬಿ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನೂ ದಾಖಲೆಗಳ ಪರಿಶೀಲನೆ ವೇಳೆ ಸಲ್ಲಿಸಲಾಗಿದ್ದ ಜಾತಿ ಮತ್ತು ಆದಾಯ ಪ್ರಮಾಣಪತ್ರದಲ್ಲಿ ಕುಟುಂಬದ ವಾರ್ಷಿಕ ಆದಾಯ ₹40 ಸಾವಿರ ಎಂದು ನಮೂದಿಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಆದರೆ ಶಿವಶಂಕರಪ್ಪ ಸಾಹುಕಾರ ಅವರು 2019ರಿಂದಲೇ KPSC ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಆಯೋಗದಿಂದ ವೇತನ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಆದಾಯದ ವಿವರದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

KPSCಯ ಸಮಗ್ರತೆ, ವಿಶ್ವಾಸಾರ್ಹತೆ ಮತ್ತು ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ, ರಾಷ್ಟ್ರಪತಿಗಳ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular