ಬೆಂಗಳೂರು: ಭಾಜಪ ಹಿರಿಯ ನಾಯಕ ಮತ್ತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಅವರ ಮೇಲೆ ಹೇರಲಾಗಿರುವ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ತನಿಖೆಗೆ ತಡೆಯಾಜ್ಞೆ ನೀಡಿದೆ.
ಈಶ್ವರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣದಲ್ಲಿ ಯಾವುದೇ ಪ್ರಾಥಮಿಕ ತನಿಖೆ ನಡೆಸದೇ ನೇರವಾಗಿ ಎಫ್‌ಐಆರ್ ದಾಖಲಾಗಿರುವುದು ಪ್ರಶ್ನಾರ್ಹ ಎಂದು ಅಭಿಪ್ರಾಯಪಟ್ಟಿದೆ.
ಈಶ್ವರಪ್ಪ ಪರ ವಕೀಲರಾಗಿರುವ ಅಶೋಕ್ ಹಾರನಹಳ್ಳಿ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸುತ್ತಾ, “ಪ್ರಾಥಮಿಕ ಪರಿಶೀಲನೆಯಿಲ್ಲದೇ ಎಫ್‌ಐಆರ್ ದಾಖಲಿಸಲಾಗಿದೆ. ಇದರಿಂದ ಆರೋಪಿ ಬಂಧನದ ಭೀತಿಯಲ್ಲಿ ಇದ್ದಾರೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಚಾರಣೆಯ ವೇಳೆ, ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಅಲ್ಲದೇ, ಮುಂದಿನ ವಿಚಾರಣೆವರೆಗೆ ತನಿಖೆ ಮುಂದುವರಿಯದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.