ಕೊಪ್ಪಳ: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯ ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಮತ್ತು ಅದರ ಜೊತೆಗೆ ಜಿಲ್ಲೆಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವ ಕೆಲಸ ಮಾಡಬೇಕು ಈ ಹಿಂದೆ ಹೊಸಪೇಟೆಯಲ್ಲಿ ಆದ ಕಂದಾಯ ಇಲಾಖೆಯ ಅದ್ದೂರಿ ಕಾರ್ಯಕ್ರಮದಂತೆ ನಮ್ಮ ಜಿಲ್ಲೆಯಲ್ಲಿ ಕಾರ್ಯಕ್ರಮ ಆಗಬೇಕೆಂದು ಹೇಳಿದರು.
ತಾಲ್ಲೂಕುವಾರು ತಹಶಿಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಟೀಂ ರೀತಿಯಲ್ಲಿ ಕೆಲಸ ಮಾಡಬೇಕು. ಪ್ರತಿ ತಾಲೂಕಿನಿಂದ ಎಷ್ಟು ಫಲಾನುಭವಿಗಳು ಬರುತ್ತಾರೆ ಎನ್ನುವ ಪಟ್ಟಿಯನ್ನು ತೈಯಾರಿಸಬೇಕು ಹಾಗೂ ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತಮ್ಮ ಮೇಲಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ಫಲಾನುಭವಿಗಳನ್ನು ಕರೆತರಲು ಬಸ್ಸುಗಳು ವ್ಯವಸ್ಥೆ ಆಗಬೇಕು. ಅದ್ದೂರಿ ಕಾರ್ಯಕ್ರಮ ಮಾಡುವ ಮೂಲಕ ಜಿಲ್ಲೆಯಿಂದ ಒಂದು ಒಳ್ಳೆಯ ಸಂದೇಶ ಹೋಗಬೇಕೆಂದು ಹೇಳಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದೆ. ಮಳೆಯ ಕಾರಣ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದೂಡಲಾಗಿತ್ತು. ಇದು ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮ ಅಲ್ಲ. ಸರಕಾರಿ ಕಾರ್ಯಕ್ರಮ ಆಗಿರುವುದರಿಂದ ಅಧಿಕಾರಿಗಳು ಆಸಕ್ತಿವಹಿಸಿ ಕೆಲಸ ಮಾಡಬೇಕು. ಈ ಹಿಂದೆ 2017 ರಲ್ಲಿ ಒಳ್ಳೆಯ ಕಾರ್ಯಕ್ರಮ ಜಿಲ್ಲೆಯಲ್ಲಿ ಮಾಡಿದ್ದೆವು ಅದರಂತೆ ಈ ಕಾರ್ಯಕ್ರಮ ಆಗಬೇಕೆಂದರು.
ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಬೇಕು. ಕಾರ್ಯಕ್ರಮ ಯಶಸ್ವಿಯಾಗಲು ಸಾರಿಗೆ ಸೇರಿದಂತೆ ವಿವಿಧ ಕಮಿಟಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಮತ್ತು ಮೈಕ್ರೋ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕೆಲಸಗಳಿಗೆ ತಕ್ಷಣವೇ ಅನುಮೋದನೆ ನೀಡಬೇಕು. ಇತರೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸೇರಿಸಿ ಎಲ್ಲವನ್ನೂ ಒಟ್ಟಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವಂತೆ ಆಗಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುವುದು. ಈ ಕುರಿತು ಪ್ರತಿ ವಿಧಾನಸಭಾವಾರು ಸಭೆಗಳನ್ನು ಕರೆದು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.