ನವದೆಹಲಿ: ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಜಮೀನಿಗೆ ರೂ.3400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ ಮೈಸೂರು ರಾಜವಂಶಸ್ಥರಿಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ದ್ವಿಸದಸ್ಯ ಪೀಠ ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡಬೇಕು ಎಂದು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ರೂ.3400 ಕೋಟಿಯ ಟಿಡಿಆರ್ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಈ ಟಿಡಿಆರ್ ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿಕೊಂಡಿತ್ತು.