ಮಂಡ್ಯ: ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿದ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರ ಗುರಿಯಾಗಿಲ್ಲ. ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ. ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ, ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಈ ಸಂಬಂಧ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್,ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ , ಡಾ.ಸಿದ್ದರಾಮಯ್ಯ , ಜೋಗಿಗೌಡ , ಶ್ರೀಧರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.