ಬೆಂಗಳೂರು :ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ಆಯವ್ಯಯದ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ೨೦೨೬-೨೭ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.
ಈ ವೇಳೆ ರಾಜ್ಯದಲ್ಲಿನ ಸರ್ಕಾರಿ ನೌಕರರಿಗೆ ನ್ಯಾಷನಲ್ ಪೆನ್ಷನ್ ಸ್ಕೀಮ್ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರು, ನಿವೃತ್ತ ನೌಕರರು ಹಾಗೂ ಇತರೆ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದವರಿಗೆ ಅನುಕೂಲವಾಗುವಂತೆ ಎಂಎಸ್‌ಐಎಲ್ ಸಂಸ್ಥೆಯ ಮೂಲಕ ಪ್ರತಿ ಜಿಲ್ಲೆಯಲ್ಲಿ ನೌಕರರ ಕ್ಯಾಂಟೀನ್ ಪ್ರಾರಂಭಿಸಬೇಕು. ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಾರ್ವಜನಿಕರಿಂದ ನಡೆಯುವ ಹಲ್ಲೆ, ದೌರ್ಜನ್ಯ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕಿರುಕುಳ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ವಿಶೇಷ ಕಾನೂನು ತರಲು ಮನವಿ ಮಾಡಲಾಯಿತು.
ಈ ಸಂಬಂಧ ಸಂಬಂಧಿತ ಅಧಿಕಾರಿಗಳಿಗೆ ಕಡತವನ್ನು ಶೀಘ್ರ ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು. ಇದೆ ವೇಳೆ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಎಲ್.ಭೈರಪ್ಪರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಎಸ್.ಬಸವರಾಜ್ ಉಪಾಧ್ಯಕ್ಷರಾದ ಸೋಮಶೇಖರ್, ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಬೇಡಿಕೆಗಳನ್ನು ಬಜೆಟ್‌ನಲ್ಲಿ ಪರಿಗಣಿಸುವ ವಿಶ್ವಾಸವನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.



