ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಗಾದಿಗಾಗಿ ಪೈಪೋಟಿಗೆ ಬಿದ್ದಿರುವ ಕೆಲವು ನಾಯಕರ ವಿರುದ್ಧ ಹೈಕಮಾಂಡ್‌ಗೆ ಹಿರಿಯ ಮುಖಂಡರು ದೂರು ನೀಡಿರುವ ಬೆನ್ನಲ್ಲೇ “ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸಲ್ಲ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನು ಈ ಸ್ಥಾನದಲ್ಲಿ ಮುಂದುವರಿಯುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮ ಅರಣ್ಯ ಸಿಬ್ಬಂದಿಗಳ ಸ್ಮಾರಕಕ್ಕೆ ಬುಧವಾರ ಪುಷ್ಪನಮನ ಸಲ್ಲಿಸಿ ಮಾತನಾಡಿ ಸಿಎಂ ಸ್ಥಾನದ ಬಗ್ಗೆ ಯಾರು ಹೇಳಿಕೆ ನೀಡಬಾರದು, ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರು ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಈ ಬಗ್ಗೆ ಚರ್ಚೆ ಅನಗತ್ಯ ಎಂದರು.
ಎಐಸಿಸಿಗೆ ಹಿರಿಯ ನಾಯಕರಿಂದ ಪತ್ರ
ಸಿಎಂ ಕುರ್ಚಿಗೆ ಸಂಬಂಧಿಸಿ ಹಿರಿಯ ಸಚಿವರ ಸಹಿತ ಮುಖಂಡರು ಹೇಳಿಕೆಗಳು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈ ಅಂತಃಕಲಹ ಮತ್ತು ಬೇಜವಾಬ್ದಾರಿಯ ಹೇಳಿಕೆಗಳು ಸರಕಾರದ ಮೇಲೆ ಜನ ಮತ್ತು ಪಕ್ಷದ ಕಾರ್ಯಕರ್ತರು ನಂಬಿಕೆ ಹಾಗೂ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿರಿಯ ನಾಯಕರು ದೂರು ನೀಡಿದ್ದರು. ಮೇಲ್ಮನೆ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ದಿನೇಶ್ ಗೂಳಿಗೌಡ ಒಂದು ದಿನದ ಹಿಂದೆ ಈ ಸಂಬಂಧ ಖರ್ಗೆಯವರಿಗೆ ಪತ್ರ ಬರೆದು, ಸಿಎಂ ಕುರ್ಚಿ ಬಗ್ಗೆ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮದ ಎಚ್ಚರಿಕೆ ನೀಡುವಂತೆ ಪತ್ರ ಬರೆದಿದ್ದರು.
ಬಿಜೆಪಿ ಹಗರಣ ತನಿಖೆಗೆ ಸಂಪುಟ ಉಪಸಮಿತಿ
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ಸದಸ್ಯರಾಗಿದ್ದಾರೆ. ಈ ಸಮಿತಿಗೆ ವರದಿ ನೀಡಲು1 ರಿಂದ 2 ತಿಂಗಳ ಅವಧಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪಿಎಸ್‌ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ ಹಗರಣ ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿ ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ನಾವು ದ್ವೇಷ ರಾಜಕಾರಣ ಮಾಡಲ್ಲ
ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು. ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿ ನ್ಯಾ. ಬಿ.ವೀರಪ್ಪ ಅವರ ಆಯೋಗವು ವರದಿಯನ್ನು ನೀಡಿದ್ದು, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿ ಎಸ್.ಐ.ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.