ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ಮೇ 30 ಮತ್ತು 31ರಂದು ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ಕ್ರಮಗಳು:
- ರಾಜ್ಯದ 170 ತಾಲೂಕುಗಳು ಪ್ರವಾಹ/ಭೂಕುಸಿತ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.
- ಮುಂಜಾಗ್ರತೆಯಾಗಿ 2,296 ಕಾಳಜಿ ಹಾಗೂ ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.
- ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಪ್ರವಾಹಪೀಡಿತ ಸ್ಥಳಗಳು ಗುರುತಿಸಲ್ಪಟ್ಟಿವೆ.
- ಮೇ 26ರ ತನಕ 45 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಗೊಂಡಿವೆ; ಶೇ.99ರಷ್ಟು ಕುಟುಂಬಗಳಿಗೆ ಆರ್ಥಿಕ ನೆರವು ಪಾವತಿಸಲಾಗಿದೆ.
- ಜಿಲ್ಲಾ/ತಾಲೂಕು ಮಟ್ಟದ ಪಿ.ಡಿ. ಖಾತೆಯಲ್ಲಿ ₹97,351.95 ಲಕ್ಷ ಅನುದಾನ ಲಭ್ಯವಿದೆ.